ಕಲಬುರಗಿ: ನನಗೆ ವಹಿಸಿಕೊಟ್ಟಿರುವ ಜವಾಬ್ದಾರಿಯನ್ನು ಅತ್ಯಂತ ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ ಎಂದು ನೂತನ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್ಡಿಬಿ) ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ್ ಹೇಳಿದರು.
ಅಧಿಕಾರ ಸ್ವೀಕರಿಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಚಿವ ಸ್ಥಾನದ ಬದಲಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ನೀಡಿರುವ ಕುರಿತು ರೇವೂರ ಪ್ರತಿಕ್ರಿಯಿಸಿದರು. ಮಂತ್ರಿ ಸ್ಥಾನದ ರೇಸ್ನಲ್ಲಿದ್ದ ಕುರಿತು ಹೆಚ್ಚು ಪ್ರತಿಕ್ರಿಯಿಸಲ್ಲ. ಕೊಟ್ಟ ಜವಾಬ್ದಾರಿ ಬಗ್ಗೆ ತೃಪ್ತಿ ಇದೆ. ಮುಂಬರುವ ದಿನಗಳಲ್ಲಿ ಸಚಿವ ಸ್ಥಾನಕ್ಕೂ ಪ್ರಯತ್ನಿಸುತ್ತೇನೆ. ಸಚಿವ ಸ್ಥಾನ ಕೊಡುವ ನಂಬಿಕೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕೋವಿಡ್ ನಿವಾರಣೆಯೇ ನಮ್ಮ ಮೊದಲ ಆದ್ಯತೆ. ಕಲ್ಯಾಣ ಕರ್ನಾಟಕದ ಆರು ಜಿಲ್ಲೆಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಅಗತ್ಯವಿರುವ ಮೂಲಸೌಕರ್ಯ ಕಲ್ಪಿಸಲು ಪ್ರದೇಶಾಭಿವೃದ್ಧಿ ಮಂಡಳಿಯ ಮೂಲಕ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.