ಕಲಬುರಗಿ : ಕೋವಿಡ್ ವೈದ್ಯಕೀಯ ಉಪಕರಣಗಳ ಖರೀದಿ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಆರೋಪಗಳಿಗೆ ಲೀಗಲ್ ನೋಟಿಸ್ ನೀಡಿದ್ದಕ್ಕೆ ಶಾಸಕ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಲೀಗಲ್ ನೋಟಿಸ್ ನೀಡೋದಕ್ಕೆ ರವಿಕುಮಾರ್ ಯಾರು ಎಂದು ಪ್ರಶ್ನಿಸಿದ್ದಾರೆ. ಸರ್ಕಾರದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಸಿದ್ದರಾಮಯ್ಯ ಮತ್ತು ಡಿಕೆಶಿ ಆರೋಪಿಸಿರೋದು ಸರ್ಕಾರದ ವಿರುದ್ಧವೇ ಹೊರತು ಬಿಜೆಪಿ ಮೇಲೆ ಅಲ್ಲ.
ಹಾಗೊಂದು ವೇಳೆ ಲೀಗಲ್ ನೋಟಿಸ್ ಕಳಿಸೋದಿದ್ದರೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ಕಳುಹಿಸಲಿ ಅಥವಾ ಸಂಬಂಧಪಟ್ಟ ಸಚಿವರು, ಅಧಿಕಾರಿಗಳು ನೋಟಿಸ್ ನೀಡಲಿ. ಆದರೆ, ಎನ್ ರವಿಕುಮಾರ್ ಲೀಗಲ್ ನೋಟಿಸ್ ಕಳಿಸಿದ್ದಾರೆ. ಬಿಜೆಪಿ ಪ್ರಧಾನ ಕಾರ್ಯದರ್ಶಿಗೂ ಇದಕ್ಕೂ ಏನು ಸಂಬಂಧ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪಕ್ಷದ ಮೂಲಕ ನೋಟಿಸ್ ನೀಡಿರುವುದು ಎಷ್ಟು ಸರಿ? ಭ್ರಷ್ಟಾಚಾರಕ್ಕೆ ಸಂಬಂಧಿಸಿದ ದಾಖಲೆಗಳನ್ನು ನಮ್ಮ ನಾಯಕರು ನೀಡಿದ್ದಾರೆ. ಲೀಗಲ್ ನೋಟಿಸ್ ನಿಡೋದಾದ್ರೆ ಸರ್ಕಾರ ನೀಡಲಿ ಎಂದು ವಾಗ್ದಾಳಿ ನಡೆಸಿದರು.