ಕೊಡಗು: ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು ಇಂದಿನಿಂದ 21 ದಿನಗಳ ಕಾಲ ಹೋಂ ಸ್ಟೇ, ರೆಸಾರ್ಟ್ ಹಾಗೂ ಹೋಟೆಲ್ಗಳನ್ನು ಬಂದ್ ಮಾಡಲು ಹೋಟೆಲ್ ಹಾಗೂ ರೆಸಾರ್ಟ್ ಅಸೋಸಿಯೇಷನ್ ನಿರ್ಧರಿಸಿದೆ.
ಈಗಾಗಲೇ ಹೋಂ ಸ್ಟೇ ನಡೆಸುತ್ತಿದ್ದ ಮಹಿಳೆಗೆ ಕೊರೊನಾ ಪಾಸಿಟಿವ್ ಬಂದಿದ್ದು, ಇದರಿಂದ ಎಚ್ಚೆತ್ತುಕೊಂಡಿರುವ ಸಂಘವು, ಈ ನಿರ್ಧಾರವನ್ನು ತೆಗೆದುಕೊಂಡಿದೆ.
ಜಿಲ್ಲೆಯಲ್ಲಿ ದಿನೇ ದಿನೇ ಕೊವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ, ಜಿಲ್ಲೆಯ ಜನತೆ ಹಾಗೂ ಅತಿಥಿಗಳ ಹಿತದೃಷ್ಠಿಯಿಂದ ಸಂಪೂರ್ಣ ಬಂದ್ ಮಾಡುವುದಾಗಿ ಅಸೋಸಿಯೇಷನ್ ಬಿ.ಆರ್. ನಾಗೇಂದ್ರ ಪ್ರಸಾದ್ ತಿಳಿಸಿದ್ದಾರೆ. ಅಲ್ಲದೆ ಈ ನಿರ್ಧಾರಕ್ಕೆ ಮಾಲೀಕರು ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ಈಗಾಗಲೇ ಜಿಲ್ಲಾಧಿಕಾರಿ ಅನೀಸ್ ಕೆ. ಜಾಯ್ ಅವರು ಕೊರೊನಾ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಹೋಂ ಸ್ಟೇ, ರೆಸಾರ್ಟ್ ಮತ್ತು ಹೋಟೆಲ್ ಸಿಬ್ಬಂದಿಗೂ ಆಯ್ಕೆ ವಿಧಾನಗಳಲ್ಲಿ ಕೊರೊನಾ ಟೆಸ್ಟ್ ಮಾಡಿಸಲು ಚಿಂತಿಸಲಾಗಿದೆ ಎಂದು ತಿಳಿಸಿದ್ದಾರೆ.