ಕೊಡಗು: ಮೂಲ ಸೌಲಭ್ಯಗಳಿಲ್ಲದೇ ಸಂಕಷ್ಟದ ಜೀವನ ನಡೆಸುತ್ತಿರುವ ಅರಣ್ಯವಾಸಿಗಳು, ಆದಿವಾಸಿಗಳಿಗೆ ಮೂಲ ಸೌಕರ್ಯ ಕಲ್ಪಿಸುವಂತೆ ಜಿಲ್ಲಾ ಬುಡಕಟ್ಟು ಕೃಷಿಕರ ಸಂಘದಿಂದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಲಾಯಿತು.
ಕೊಡಗು ಜಿಲ್ಲೆಯ ಪಶ್ಚಿಮ ಘಟ್ಟ ಸೇರಿದಂತೆ ಅರಣ್ಯದ ಅಂಚಿನಲ್ಲಿ ಬದುಕು ಕಟ್ಟಿಕೊಂಡಿರುವ ಆದಿವಾಸಿಗಳಿಗೆ ಮೂಲ ಸೌಲಭ್ಯಗಳೇ ಮರಿಚಿಕೆಯಾಗಿವೆ. ಹಾಡಿಗಳಿಗೆ ರಸ್ತೆ, ವಿದ್ಯುತ್, ಶುದ್ಧ ಕುಡಿಯುವ ನೀರು ಹಾಗೂ ವಾಸಕ್ಕೆ ಯೋಗ್ಯವಾದ ಮನೆಗಳಿಲ್ಲದೇ ಸಂಕಷ್ಟದ ಜೀವನ ನಡೆಸುತ್ತಿದ್ದಾರೆ. ಕಳೆದೆರಡು ವರ್ಷಗಳಿಂದ ಸುರಿದ ಮಹಾಮಳೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಆದರೂ ಜನಪ್ರತಿನಿಧಿಗಳು, ಜಿಲ್ಲಾಡಳಿತ ಮತ್ತು ಸರ್ಕಾರ ನಮ್ಮ ಕಷ್ಟಗಳಿಗೆ ಸ್ಪಂದಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸರ್ಕಾರ ಕೂಡಲೇ ಮೂಲ ಸೌಲಭ್ಯಗಳನ್ನು ಒದಗಿಸುವಂತೆ ಅನಿರ್ದಿಷ್ಟಾವಧಿ ಉಪವಾಸ ಸತ್ಯಗ್ರಹ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಬುಡಕಟ್ಟು ಕೃಷಿಕರ ಸಂಘದ ತಾಲೂಕು ಘಟಕದ ಅಧ್ಯಕ್ಷ ಕುಡಿಯರ ಎ.ಮುತ್ತಪ್ಪ ಎಚ್ಚರಿಸಿದರು.