ಕೊಡಗು : ಕೊರೊನಾ ವಿರುದ್ಧದ ಸಮರ ಸೈನಿಕರೆಂದೇ ಹೆಸರಾಗಿರುವ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ಮಾಡಲು ಮುಂದಾಗಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ನಾಪೋಕ್ಲುವಿನಲ್ಲಿ ನಡೆದಿದೆ ಎನ್ನಲಾಗಿದೆ.
ಆಶಾ ಕಾರ್ಯಕರ್ತೆ ಲತಾ ಮತ್ತು ಕಿರಿಯ ಆರೋಗ್ಯ ಸಹಾಯಕಿ ಜಲಜಾಕ್ಷಿ ಎಂಬುವರು ಮಾಹಿತಿ ಪಡೆಯಲು ನಾಪೋಕ್ಲು ಬಳಿಯ ಪುದಿನೆರವನ ಬೋಪಯ್ಯ ಎಂಬ ನಿವೃತ್ತ ಯೋಧರ ಮನೆಗೆ ತೆರಳಿದ್ದ ವೇಳೆ, ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆಗೆ ಮುಂದಾಗಿದ್ದಾರೆ ಎನ್ನುವ ಆರೋಪಗಳು ಕೇಳಿ ಬಂದಿವೆ. ಈ ಸಂಬಂಧ ಆಶಾ ಕಾರ್ಯಕರ್ತೆಯರು ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಆಶಾ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ಪೂರ್ಣಿಮಾ ಬಸಪ್ಪ, ಕೊರೊನಾ ಸಂಬಂಧಿತ ಮಾಹಿತಿ ಪಡೆಯುವ ನಿಟ್ಟಿನಲ್ಲಿ ತಿಂಗಳಿನಿಂದ ಅವಿರತ ಶ್ರಮಿಸುತ್ತಿರುವ ಕಾರ್ಯಕರ್ತೆ ಮತ್ತು ಕಿರಿಯ ಆರೋಗ್ಯ ಸಹಾಯಕಿ ಮೇಲೆ ಹಲ್ಲೆಗೆ ಮುಂದಾದ ಆರೋಪಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಆರೋಪಿಯನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.