ಕೊಡಗು: ನಗರದ ಅಶ್ವಿನಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೈದ್ಯ ಸೇರಿದಂತೆ ಜಿಲ್ಲೆಯಲ್ಲಿ ಇಂದು ಹೊಸದಾಗಿ 14 ಕೊರೊನಾ ಪ್ರಕರಣಗಳು ದೃಢಪಟ್ಟಿವೆ.
ಜಿಲ್ಲೆಯಲ್ಲಿ ಹಿಂದಿನ 08 ಪ್ರಕರಣಗಳು ಸೇರಿದಂತೆ ಒಟ್ಟು 22 ಪ್ರಕರಣಗಳು ವರದಿಯಾಗಿದ್ದವು. ಇದರಲ್ಲಿ 03 ಜನರು ಗುಣಮುಖರಾಗಿದ್ದು, ಪ್ರಸ್ತುತ ಜಿಲ್ಲೆಯಲ್ಲಿ 19 ಪ್ರಕರಣಗಳು ಸಕ್ರಿಯವಾಗಿವೆ. ಇಂದು ಪತ್ತೆಯಾದ 14 ಪ್ರಕರಣಗಳಲ್ಲಿ 7 ಪ್ರಕರಣಗಳು ಕರ್ತವ್ಯದಲ್ಲಿದ್ದ ಹಾಗೂ ಖಾಸಗಿ ಕ್ಲಿನಿಕ್ ಮತ್ತು ಕೋವಿಡ್ಯೇತರ ಆಸ್ಪತ್ರೆಗೆ ಸಂಬಂಧಿಸಿದ್ದಾರೆ. ಉಳಿದ 05 ಪ್ರಕರಣಗಳು ಈ ಹಿಂದೆ ವರದಿಯಾದ ಸೋಂಕಿತ ಪ್ರಕರಣಗಳ ಪ್ರಾಥಮಿಕ ಸಂಪರ್ಕಿತರಾಗಿದ್ದಾರೆ. ಹೊಸದಾಗಿ ವರದಿಯಾಗಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ನಿಯಂತ್ರಿತ ವಲಯಗಳನ್ನು ಮಾಡಲು ಈಗಾಗಲೇ ಜಿಲ್ಲಾಡಳಿತ ಕ್ರಮಗಳನ್ನು ತೆಗೆದುಕೊಂಡಿದೆ. ಅಲ್ಲದೇ ನಗರದ ಅಶ್ವಿನಿ ಆಸ್ಪತ್ರೆಯಲ್ಲಿ ಕರ್ವವ್ಯ ನಿರ್ವಹಿಸುತ್ತಿದ್ದ ವೈದ್ಯರಿಗೆ ಸೋಂಕು ದೃಢಪಟ್ಟ ಹಿನ್ನೆಲೆ ನಾಳೆ ಆಸ್ಪತ್ರೆಯನ್ನು ಸಂಪೂರ್ಣ ಸೀಲ್‌ಡೌನ್ ಮಾಡುವ ಸಾಧ್ಯತೆಗಳಿವೆ.
ಈ ಹಿಂದೆ ವರದಿಯಾದ ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿ ಇರುವುದರಿಂದ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯ ಇಲ್ಲ ಎಂದು ಜಿಲ್ಲಾಧಿಕಾರಿ ಅನೀಸ್ ಕೆ.ಜಾಯ್ ತಿಳಿಸಿದ್ದಾರೆ.