ಕೊಡಗು: ಜಿಲ್ಲೆಯ ವಿರಾಜಪೇಟೆ ಪಟ್ಟಣದ ಅಯ್ಯಪ್ಪ ಬೆಟ್ಟ ಮತ್ತು ನೆಹರು ನಗರದಲ್ಲಿನ ಕಡಿದಾದ ಪ್ರದೇಶದಲ್ಲಿರುವ ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸಲು ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಸದ್ಯ, ತಾತ್ಕಾಲಿಕವಾಗಿ ಮಳೆಗಾಲದ ಅವಧಿಯಲ್ಲಿ ಸ್ಥಳಾಂತರಿಸಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿರಾಜಪೇಟೆ ತಾಲೂಕಿನಲ್ಲಿ ಪ್ರಾಕೃತಿಕ ವಿಕೋಪ ಎದುರಿಸುವ ಸಂಬಂಧ ಕೈಗೊಳ್ಳಲಾಗಿರುವ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಮಾಹಿತಿ ಪಡೆದು ಮಾತನಾಡಿದರು. ವಿರಾಜಪೇಟೆ ತಾಲೂಕಿನ ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿ ಮಳೆಗಾಲದಲ್ಲಿ ತಾತ್ಕಾಲಿಕವಾಗಿ ಸ್ಥಳಾಂತರಿಸಲು ಕ್ರಮ ವಹಿಸಬೇಕು. ಮಳೆಗಾಲದಲ್ಲಿ ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಮಾಹಿತಿ ನೀಡಬೇಕು. ಅಗತ್ಯವಿರುವ ಕಡೆ ಪರಿಹಾರ ಕೇಂದ್ರ ತೆರೆಯಬೇಕೆಂದು ಸೂಚಿಸಿದರು.
ಈ ವೇಳೆ ತಹಶೀಲ್ದಾರ್ ಯೋಗಾನಂದ ಅಯ್ಯಪ್ಪ, ಬೆಟ್ಟ ಹಾಗೂ ನೆಹರು ನಗರದ ಒಟ್ಟು 57 ಕುಟುಂಬಗಳನ್ನು ಸ್ಥಳಾಂತರಿಸಬೇಕಿದೆ. ತಾಲೂಕಿನ ತೋರ ಮತ್ತಿತರ ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಲಾಗಿದೆ. ಇಂತಹ ಸೂಕ್ಷ್ಮ ಪ್ರದೇಶದ ಕುಟುಂಬಗಳ ಸ್ಥಳಾಂತರಕ್ಕೆ ಅಗತ್ಯ ಕ್ರಮ ವಹಿಸಲಾಗುವುದು ಎಂದರು.
ನಿಟ್ಟೂರು, ಬಾಳಲೆ ಮತ್ತಿತರ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.
ಓದಿ: 'ಭಾರತೀಯ ರೂಪಾಂತರಿ' ಕುರಿತ ಪೋಸ್ಟ್ಗಳನ್ನು ತೆಗೆದುಹಾಕಿ: ಸರ್ಕಾರ ಸೂಚನೆ