ಕೊಡಗು: ವಯಸ್ಸಾದ ಹುಲಿಯನ್ನು ಕೊಂದು ಅದರ ಚರ್ಮವನ್ನು ಮಾರಾಟ ಮಾಡಲು ಯತ್ನಿಸಿದ ನಾಲ್ವರು ಆರೋಪಿಗಳನ್ನು ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಒಂದು ಘಟನೆ ಕೊಡಗು ಜಿಲ್ಲೆಯ ಸಿದ್ದಾಪುರ ಸಮೀಪದ ಮಾಲ್ದಾರೆಯಲ್ಲಿ ನಡೆದಿದೆ.
ಬಂಧಿತ ಆರೋಪಿಗಳನ್ನು ಹರೀಶ್, ರಮೇಶ್, ಮನು ಹಾಗೂ ರಾಜೇಶ್ ಎಂದು ಗುರುತಿಸಲಾಗಿದೆ. ವಯಸ್ಸಾದ ಹುಲಿ ಕೊಂದು, ಅದರ ಚರ್ಮ, ಉಗುರು ಹಾಗೂ ಪಾದಗಳನ್ನು ಕತ್ತರಿಸಿ ಮಾರಾಟ ಮಾಡಲು ಯತ್ನಿಸಿದ್ದರು. ಈ ಭಾಗದಲ್ಲಿ ಹುಲಿಗಳನ್ನು ಕೊಂದು ಅದರ ಚರ್ಮ ಹಾಗೂ ಇತರ ಭಾಗಗಳನ್ನ ಕತ್ತರಿಸಿ ಮಾರಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದರು.
ಇದೀಗ ಬಂಧಿತರಿಂದ ಹುಲಿಯ ಚರ್ಮ, 7 ಉಗುರು, 2 ಕಾಲನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ ಪ್ರಕರಣ ಕುರಿತಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ. ಹೆಚ್ಚಿನ ವಿಚಾರಣೆಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.