ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ವರದಿಯನ್ನಾಧರಿಸಿ ಜನತೆ ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಮುನ್ಸೂಚನೆ ನೀಡಿದೆ.
ಸೆಪ್ಟಂಬರ್ 6 ರಂದು ಆರೇಂಜ್ ಅಲರ್ಟ್ 115.6 ಮಿ.ಮೀ ಗಿಂತಲೂ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈಗಾಗಲೇ ಜಿಲ್ಲೆಯಾದ್ಯಂತ ಸುರಿದಿರುವ ಭಾರಿ ಮಳೆಗೆ ಪ್ರವಾಹ ಉಂಟಾಗಿ ಅಪಾರ ಪ್ರಮಾಣದಲ್ಲಿ ಆಸ್ತಿ-ಪಾಸ್ತಿ, ಜೀವ ಹಾನಿ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಸ್ಥಳೀಯರು ಹಾಗೂ ಪ್ರವಾಸಿಗರು ಎಚ್ಚರಿಕೆಯಿಂದ ಇರುವಂತೆ ಸುತ್ತೋಲೆ ಹೊರಡಿಸಲಾಗಿದೆ.
ಜಿಲ್ಲೆಯಲ್ಲಿ ಇಂದು ಸಂಜೆಯಿಂದ ವರುಣ ಮತ್ತೆ ಅಬ್ಬರಿಸುತ್ತಿದ್ದು, ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳು ಎದುರಾದರೆ ತುರ್ತು ದೂರವಾಣಿ ಸಂಖ್ಯೆ ಟೋಲ್ ಫ್ರೀ ಸಂಖ್ಯೆ 8550001077 ಸಂಪರ್ಕಿಸುವಂತೆ ಕೊಡಗು ಜಿಲ್ಲಾಧಿಕಾರಿ ಅನೀಸ್ ಕೆ. ಜಾಯ್ ಮನವಿ ಮಾಡಿದ್ದಾರೆ.