ಕೊಡಗು: ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಸಿಬ್ಬಂದಿಯೊಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿರುವುದರಿಂದ ಸಿಬ್ಬಂದಿಯನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
![Kodagu](https://etvbharatimages.akamaized.net/etvbharat/prod-images/7995463_172_7995463_1594543597519.png)
ಸೋಂಕು ತಗುಲಿದ ಸಿಬ್ಬಂದಿ ವಾಸವಿದ್ದ ವಸತಿಗೃಹದ ಸುತ್ತಲಿನ 8 ವಸತಿ ಗೃಹಗಳ ವ್ಯಾಪ್ತಿಯನ್ನು ಕಂಟೈನ್‌ಮೆಂಟ್ ವಲಯ ಎಂದು ಘೋಷಿಸಲಾಗಿದೆ. ವಸತಿ ಗೃಹಗಳಲ್ಲಿ ವಾಸವಿದ್ದ ಸಿಬ್ಬಂದಿ ಹಾಗೂ ಅವರ ಕುಟುಂಬವನ್ನು ಹೋಂ ಕ್ವಾರಂಟೈನ್‌ನಲ್ಲಿ ಇರುವಂತೆ ಸೂಚಿಸಲಾಗಿದೆ.
ಸಿಬ್ಬಂದಿಯ ಪ್ರಾಥಮಿಕ ಸಂಪರ್ಕ ಹೊಂದಿದ ಸುಮಾರು 15 ವ್ಯಕ್ತಿಗಳನ್ನು ಕೋವಿಡ್-19 ಪರೀಕ್ಷೆಗೆ ಮಾದರಿಯನ್ನು ನೀಡುವಂತೆ ಹಾಗೂ ಹೋಂ ಕ್ವಾರಂಟೈನ್‌ನಲ್ಲಿ ಇರಲು ಸೂಚಿಸಲಾಗಿದೆ. ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿಗಳ ಆರೋಗ್ಯದ ಬಗ್ಗೆ ತೀವ್ರ ಕಾಳಜಿಯನ್ನು ತೋರಿದ್ದು, ಪ್ರಥಮ ಹಂತದಲ್ಲಿ ಈಗಾಗಲೇ ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಕೋವಿಡ್-19 ಪರೀಕ್ಷೆ ನಡೆಸಿಸಲಾಗಿದೆ.
ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿ ಯಾವುದೇ ರೀತಿಯ ಆತಂಕಕ್ಕೆ ಒಳಗಾಗಬಾರದು. ಸಾರ್ವಜನಿಕರನ್ನು ಭೇಟಿ ಮಾಡುವ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಇಲಾಖೆಯ ವತಿಯಿಂದ ವಿತರಿಸಲಾಗಿರುವ ಸುರಕ್ಷಾ ಸಾಮಾಗ್ರಿಗಳನ್ನು ಉಪಯೋಗಿಸಿಕೊಂಡು ತಮ್ಮ ಆರೋಗ್ಯದ ಕಡೆಗೆ ಒತ್ತು ನೀಡುವ ಬಗ್ಗೆ ತಿಳಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ ತಿಳಿಸಿದ್ದಾರೆ.