ಕೊಡಗು: ಕೋವಿಡ್ ಸೋಂಕು ನಿಯಂತ್ರಿಸುವ ಹಿನ್ನೆಲೆ ಸಚಿವರು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕೆಲವೊಂದು ಸೂಚನೆಗಳು ನೀಡಿದರು.
ಮಡಿಕೇರಿ ಜಿ.ಪಂ. ಸಭಾಂಗಣದಲ್ಲಿ ಕೋವಿಡ್ ನಿಯಂತ್ರಣ ಸಂಬಂಧ ನಡೆದ ಪರಿಶೀಲನಾ ಸಭೆ ಬಳಿಕ ಮಾತನಾಡಿದ ಅವರು, ಮಡಿಕೇರಿ, ವಿರಾಜಪೇಟೆ, ಪೊನ್ನಂಪೇಟೆ, ಕುಶಾಲನಗರ ಮತ್ತು ಸೋಮವಾರಪೇಟೆ ತಾಲ್ಲೂಕು ಕೇಂದ್ರಗಳಲ್ಲಿ ಕೂಡಲೇ ಸಹಾಯವಾಣಿ ಕೇಂದ್ರ ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಇಲಾಖೆ ಜೊತೆ ಪೊಲೀಸ್, ಕಂದಾಯ, ಸ್ಥಳೀಯ ಸಂಸ್ಥೆಗಳು ಸಹ ಕೈಜೋಡಿಸಬೇಕು. ಆ ನಿಟ್ಟಿನಲ್ಲಿ ಸರ್ಕಾರದ ಮಾರ್ಗಸೂಚಿಯನ್ನು ಪಾಲಿಸುವಲ್ಲಿ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಅಧಿಕಾರಿಗಳು ರಜೆ ಇದೆ ಎಂದು ಕೇಂದ್ರ ಸ್ಥಾನ ಬಿಟ್ಟು ತೆರಳುವಂತಿಲ್ಲ. ರಜೆ ದಿನದಲ್ಲಿಯೂ ಸಹ ಕೇಂದ್ರ ಸ್ಥಾನದಲ್ಲಿದ್ದು ಶ್ರದ್ಧೆಯಿಂದ ಕೆಲಸ ನಿರ್ವಹಿಸಬೇಕು. ಕೋವಿಡ್ ನಿಯಂತ್ರಿಸುವ ನಿಟ್ಟಿನಲ್ಲಿ ಇಲಾಖೆಗಳು ಮುಖ್ಯಸ್ಥರು ಹಾಗೂ ಸಿಬ್ಬಂದಿಗಳು ತಮ್ಮ ತಮ್ಮ ಹಂತದಲ್ಲಿ ಸರ್ಕಾರದ ಮಾರ್ಗಸೂಚಿಯ ಬಗ್ಗೆ ಅರಿವು ಮೂಡಿಸಿ ಪಾಲಿಸುವಂತಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಸೂಚಿಸಿದರು.
ಜಿಲ್ಲಾ ಆಸ್ಪತ್ರೆಯಲ್ಲಿ 13 ಸಾವಿರ ಲೀಟರ್ ಸಾಮರ್ಥ್ಯದ ಆಕ್ಸಿಜನ್ ಟ್ಯಾಂಕ್ ನಿರ್ಮಿಸಲಾಗಿದೆ. ಆದ್ದರಿಂದ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆಯಿಲ್ಲ. ಆ ನಿಟ್ಟಿನಲ್ಲಿ ಕೋವಿಡ್ ನಿಯಂತ್ರಣ ಸಂಬಂಧ ಅಗತ್ಯ ಕ್ರಮ ಕೈಗೊಳ್ಳುವಲ್ಲಿ ಮುನ್ನೆಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು.
‘ಕೋವಿಶೀಲ್ಡ್, ಕೋವಾಕ್ಸಿನ್, ರೆಮ್ಡಿಸಿವಿರ್ ಲಸಿಕೆಯನ್ನು ಕಾಲ ಕಾಲಕ್ಕೆ ಜಿಲ್ಲೆಗೆ ಪೂರೈಸುವ ನಿಟ್ಟಿನಲ್ಲಿ ಸಂಬಂಧಪಟ್ಟವರ ಜೊತೆ ಚರ್ಚಿಸಲಾಗುವುದು. ಆದ್ದರಿಂದ ಲಸಿಕೆ ಮತ್ತು ಇನ್ನಿತರ ಸಂಬಂಧ ಅಗತ್ಯ ಪ್ರಸ್ತಾವನೆ ಸಲ್ಲಿಸಬೇಕು. ಕೋವಿಡ್ ಕೇರ್ ಸೆಂಟರ್ಗಳಲ್ಲಿ ಎಲ್ಲಾ ರೀತಿಯ ಅಗತ್ಯ ಆರೋಗ್ಯ ಸೇವೆಗಳು ಇರಬೇಕು ಎಂದರು.
ಕೋವಿಡ್ ಎರಡನೇ ಅಲೆಯಿಂದ ಕಠಿಣ ಪರಿಸ್ಥಿತಿ ಎದುರಿಸುವಂತಾಗಿದೆ. ಆದ್ದರಿಂದ ಅಧಿಕಾರಿಗಳು ತಮ್ಮ ಆರೋಗ್ಯದ ಜೊತೆಗೆ ತಮ್ಮ ಕರ್ತವ್ಯವನ್ನು ಅರಿತುಕೊಂಡು ಕಾರ್ಯ ನಿರ್ವಹಿಸಬೇಕಿದೆ. ಜಿಲ್ಲಾಡಳಿತದ ಜೊತೆ ವಾರಕ್ಕೆ ಮೂರು ಬಾರಿಯಾದರೂ ಕೋವಿಡ್ ನಿಯಂತ್ರಣ ಸಂಬಂಧ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚಿಸಲಾಗುತ್ತದೆ ಎಂದು ಸಚಿವ ವಿ.ಸೋಮಣ್ಣ ಹೇಳಿದರು.