ಕೊಡಗು : ಮಾಜಿ ಸಿಎಂ ಸಿದ್ದರಾಮಯ್ಯ ರಾತ್ರಿಗಿಂತ ಹಗಲು ನಿದ್ದೆ ಮಾಡುವುದೇ ಜಾಸ್ತಿ. ಸಿಎಂ ಬಿಎಸ್‌ವೈ ಬದಲಾಗಲಿದ್ದಾರೆ ಎನ್ನುವ ಬಗ್ಗೆ ಅವರಿಗೆ ಅದ್ಯಾವಾಗ ಕನಸು ಬಿದ್ದಿತ್ತೋ ಗೊತ್ತಿಲ್ಲ ಎಂದು ಸಿದ್ದರಾಮಯ್ಯ ಹೇಳಿಕೆಗೆ ಸಚಿವ ವಿ.ಸೋಮಣ್ಣ ತಿರುಗೇಟು ನೀಡಿದ್ದಾರೆ.
ಬಿ ಎಸ್ ಯಡಿಯೂರಪ್ಪ ಅವರೇ ಮುಂದೆಯೂ ಮುಖ್ಯಮಂತ್ರಿ ಆಗಿರುತ್ತಾರೆ. ಸಿಎಂ ಸ್ಥಾನ ಬದಲಾವಣೆ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹಗಲು ಕನಸನ್ನು ಕಾಣುತ್ತಿದ್ದಾರೆ. ಪಕ್ಷ, ಹೈಕಮಾಂಡ್ ಹಾಗೂ ಯಡಿಯೂರಪ್ಪ ತಮ್ಮ ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಣೆ ಮಾಡುತ್ತಿದ್ದಾರೆ ಎಂದು ಟಾಂಗ್ ನೀಡಿದ್ದಾರೆ.
ಸಿಎಂ ಬದಲಾವಣೆ ಕುರಿತು ಸ್ವಪಕ್ಷದ ಶಾಸಕರಾದ ಬಸವನಗೌಡ ಪಾಟೀಲ್ ಯತ್ನಾಳ್ ಒಬ್ಬರನ್ನು ಹೊರತು ಪಡಿಸಿದರೆ ಬೇರೆ ಯಾರೂ ಮಾತನಾಡಿಲ್ಲ. ತಮ್ಮ ಕ್ಷೇತ್ರದಲ್ಲಿ ಕೆಲಸಗಳು ಆಗಬೇಕು ಎನ್ನುವ ದೃಷ್ಠಿಯಿಂದ ಅಂತಹ ಹೇಳಿಕೆಗಳನ್ನು ಹೇಳಿದ್ದೇನೆ ಹೊರತು, ಸಿಎಂ ಬದಲಾವಣೆ ಆಗಬೇಕು ಎಂದಲ್ಲ ಅಂತಾ ಯತ್ನಾಳ್ ಸ್ಪಷ್ಟಪಡಿಸಿದ್ದಾರೆ ಎಂದು ಸಮರ್ಥಿಸಿಕೊಂಡರು.
ಆರ್‌ಆರ್‌ನಗರ ಮತ್ತು ಶಿರಾ ಈ ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿಯೇ ಗೆಲುವು ಸಾಧಿಸಲಿದೆ. ಸಂಕಷ್ಟದ ಸಂದರ್ಭದಲ್ಲಿ ಬಿಜೆಪಿ ನೇತೃತ್ವದ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸಾಕಷ್ಟು ಕೆಲಸ ಮಾಡಿವೆ. ಅದು ಎರಡು ಕ್ಷೇತ್ರಗಳ ಜನರ ಭಾವನೆಯಲ್ಲಿದೆ.
ಉಪಚುನಾವಣೆಯಿಂದ ಸರ್ಕಾರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಈಗ ಇರುವ ಬಿಜೆಪಿಯ 120 ಶಾಸಕರ ಸ್ಥಾನ 122 ಕ್ಕೆ ಏರಲಿದೆ ಎಂದು ಸೋಮಣ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ.