ಕೊಡಗು: ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಶಾಸಕರ ಭೇಟಿ, ಪರಿಶೀಲನೆ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಅವರು ಬುಧವಾರ ನಗರದ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿ ಕೋವಿಡ್ ಸೋಂಕಿತರ ಆರೋಗ್ಯ ವಿಚಾರಿಸಿದರು.
ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಬಿಸಿಯೂಟ ನೀಡುತ್ತಿಲ್ಲ ಎಂಬ ದೂರು ಕೇಳಿ ಬಂದ ಹಿನ್ನೆಲೆ ತಕ್ಷಣವೇ ದಿಢೀರ್ ಭೇಟಿ ನೀಡಿ ಸೋಂಕಿತರಿಂದ ಊಟೋಪಚಾರ ಹಾಗೂ ಆರೋಗ್ಯ ಬಗ್ಗೆ ಮಾಹಿತಿ ಪಡೆದರು. ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ದಾಖಲಾಗಿರುವ ಎಲ್ಲರ ಯೋಗಕ್ಷೇಮ ವಿಚಾರಿಸಿದ ಶಾಸಕರು ಸ್ವತಃ ತಾವೇ ಊಟ ಬಡಿಸಿ, ಸೋಂಕಿತರಿಗೆ ಧೈರ್ಯ ತುಂಬಿಸಿದರು. ಕೋವಿಡ್ ಸೋಂಕಿತರು ಯಾವುದೇ ಕಾರಣಕ್ಕೂ ಧೃತಿಗೆಡಬಾರದು, ಧೈರ್ಯವಾಗಿರಬೇಕು ಎಂದು ಅಪ್ಪಚ್ಚು ರಂಜನ್ ಅವರು ಸಲಹೆ ಮಾಡಿದರು.
ನಂತರ ವೈದ್ಯಾಧಿಕಾರಿಗಳ ಜೊತೆ ಸಭೆ ನಡೆಸಿದ ಶಾಸಕರು, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ.ಕಾರ್ಯಪ್ಪ, ಅಧೀಕ್ಷಕರಾದ ಡಾ.ಲೋಕೇಶ್, ಸ್ಥಾನಿಕ ವೈದ್ಯಾಧಿಕಾರಿ ಡಾ.ರೂಪೇಶ್ ಗೋಪಾಲ್ ಅವರೊಂದಿಗೆ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿನ ಕಾರ್ಯಚಟುವಟಿಕೆ ಬಗ್ಗೆ ಮಾಹಿತಿ ಪಡೆದರು.
ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಾದ ಯಾರಿಗೂ ಸಹ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಗಮನಹರಿಸುವುದು ಇಲ್ಲಿನ ವೈದ್ಯಾಧಿಕಾರಿಗಳ ಜವಾಬ್ದಾರಿಯಾಗಿದ್ದು, ಆ ನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸುವಂತೆ ವೈದ್ಯಾಧಿಕಾರಿಗಳಿಗೆ ಶಾಸಕರು ಸೂಚಿಸಿದರು.