ಮಡಿಕೇರಿ (ಕೊಡಗು): ಮಡಿಕೇರಿ ಕೋವಿಡ್ ಆಸ್ಪತ್ರೆಯಲ್ಲಿ ಸೋಂಕಿತರ ಮೊಬೈಲ್, ಸರ ಮತ್ತಿತರ ವಸ್ತುಗಳು ಕಳ್ಳತನವಾಗುತ್ತಿರುವ ಬಗ್ಗೆ ಮಾಹಿತಿ ಇದ್ದು, ಈ ಬಗ್ಗೆ ಸೂಕ್ತ ನಿಗಾ ವಹಿಸಲಾಗಿದೆ ಎಂದು ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಹೇಳಿದರು.
ಸೋಂಕಿತರ ವಸ್ತುಗಳು ಕಳ್ಳತನವಾಗುತ್ತಿರುವ ಬಗ್ಗೆ ಆಸ್ಪತ್ರೆ ಸಿಬ್ಬಂದಿಯಿಂದ ಮಾಹಿತಿ ಪಡೆದ ಬಳಿಕ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು.
ಜಿಲ್ಲೆಯ ಗುಮ್ಮನಕೊಲ್ಲಿ ಗ್ರಾಮದ ಹೃತಿಕ್ಷಾ ಎಂಬವರ ತಾಯಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದರು. ಈ ವೇಳೆ ಅವರ ಜೊತೆಗಿದ್ದ ಮೊಬೈಲ್ ಕಳ್ಳತನವಾಗಿತ್ತು. ಈ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕೋವಿಡ್ ಆಸ್ಪತ್ರೆಗೆ ಬರುವ ರೋಗಿಗಳ ಮೊಬೈಲ್ ಸೇರಿದಂತೆ ಇನ್ನಿತರ ವಸ್ತುಗಳ ಬಗ್ಗೆ ಗಮನಹರಿಸಲಾಗಿದೆ. ರೋಗಿಗಳ ಆಭರಣಗಳನ್ನು ಜೋಪಾನವಾಗಿಡಲು ಲಾಕರ್ ವ್ಯವಸ್ಥೆ ಮಾಡಲಾಗಿದೆ. ಕಳ್ಳತನ ತಡೆಯಲು ಬಿಗಿ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕರು ತಿಳಿಸಿದರು.
ಕೊಡಗು ಲಾಕ್‍ಡೌನ್ ಬಗ್ಗೆ ಜೂನ್ 7ರ ನಂತರ ನಿರ್ಧಾರ
ಕೊಡಗು ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಬರುತ್ತಿದೆ. ಜೂನ್ 7ರ ನಂತರ ಪರಿಸ್ಥಿತಿ ನೋಡಿಕೊಂಡು ಲಾಕ್‍ಡೌನ್ ಮುಂದುವರೆಸಬೇಕೆ, ಬೇಡವೇ? ಎಂಬ ಬಗ್ಗೆ ಅವಲೋಕಿಸಿ ನಿರ್ಧರಿಸಲಾಗುವುದು ಎಂದರು.
ಕೋವಿಡ್ ನಿಯಂತ್ರಿಸಲು ಸಾಕಷ್ಟು ಶ್ರಮ ವಹಿಸಲಾಗುತ್ತಿದೆ. ಯಾರಿಗಾದರೂ ರೋಗ ಲಕ್ಷಣಗಳಿದ್ದಲ್ಲಿ ತಕ್ಷಣ ಪರೀಕ್ಷೆ ಮಾಡಿಸಿಕೊಳ್ಳಬೇಕು. ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡಬಾರದು. ಆರಂಭದಲ್ಲಿಯೇ ಮುನ್ನೆಚ್ಚರಿಕೆ ವಹಿಸಿದಲ್ಲಿ ಸೋಂಕು ಬೇಗ ಗುಣಪಡಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.
ಈ ಸುದ್ದಿಯನ್ನೂ ಓದಿ: ಅಮ್ಮನ ನೆನಪು ಮೊಬೈಲ್ನಲ್ಲಿದೆ ದಯವಿಟ್ಟು ಹುಡುಕಿಕೊಡಿ.. ಜಿಲ್ಲಾಧಿಕಾರಿಗೆ ಪತ್ರ ಬರೆದ ಪುತ್ರಿ