ಕೊಡಗು: ಸಮನ್ವಯ ಸಮಿತಿ ಅಧ್ಯಕ್ಷರಾಗಿ ಮೈತ್ರಿ ಸರ್ಕಾರವನ್ನು ಕೆಡವಿದ್ದು ಸಿದ್ದರಾಮಯ್ಯ ಎಂದು ಎಲ್ಲರಿಗೂ ಗೊತ್ತಿದೆ. ಈಗ ಪ್ರವಾಹ ಪೀಡಿತ ಸಂತ್ರಸ್ತರ ಬಗ್ಗೆ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಹೇಳಲು ಅವರಿಗೆ ಯಾವುದೇ ನೈತಿಕತೆ ಇಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿರುಗೇಟು ನೀಡಿದ್ದಾರೆ.
ಕಾವೇರಿ ಕೂಗು ಕಾರ್ಯಕ್ರಮದಲ್ಲಿ ಮಾತನಾಡಿದ ಸಂಸದೆ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡೂ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾರ್ಯವನ್ನು ಸಮರ್ಪಕವಾಗಿ ನಡೆಸುತ್ತಿಲ್ಲ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಆರೋಪವನ್ನು ತಳ್ಳಿಹಾಕಿದರು.
ಸಿದ್ದರಾಮಯ್ಯ ಆರೋಪಕ್ಕೆ ನಾನು ಯಾವುದೇ ಪ್ರತಿಕ್ರಿಯೆ ನೀಡಲ್ಲ. ಅವರು ಮೈತ್ರಿ ಸರ್ಕಾರದಲ್ಲಿ ಸಮನ್ವಯ ಸಮಿತಿಯ ಅಧ್ಯಕ್ಷರಾಗಿ ಒಂದು ವರ್ಷದಲ್ಲೇ ಸರ್ಕಾರ ಬೀಳಿಸಿದ ಮಹಾ ಪಂಡಿತ ಎಂದು ಲೇವಡಿ ಮಾಡಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರ ಪ್ರವಾಹ ಪೀಡಿತ ಸ್ಥಳಗಳ ಪುನರ್ ನಿರ್ಮಾಣಕ್ಕೆ ಮುಂದಾಗಿದೆ. ಸಿಎಂ ಬಿಎಸ್ವೈ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ದಿನದಿಂದಲೂ, ನಿತ್ಯ ಪ್ರವಾಸ ಮಾಡಿ ಪರಿಸ್ಥಿತಿ ಅರಿಯುತ್ತಿದ್ದೇವೆ. ಜನರ ಬದುಕನ್ನು ಮತ್ತೆ ಕಟ್ಟಿಕೊಡಲು ರಾಜ್ಯ ಹಾಗೂ ಕೇಂದ್ರ ಸರ್ಕಾರ ಬದ್ಧ ಎಂದು ತಲಕಾವೇರಿಯಲ್ಲಿ ಹೇಳಿದರು.