ಕೊಡಗು: ಕೊರೊನಾ ಲಸಿಕೆಯನ್ನು ಉಚಿತವಾಗಿ ವಿತರಿಸುವ ವಿಷಯಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಅವರ ನಡುವೆ ಮಾತಿನ ಸಮರ ಮುಂದುವರೆದಿದೆ.
ನನ್ನ ಧಮ್ ಬಗ್ಗೆ ಮಾತನಾಡುವ ಸಿದ್ದರಾಮಯ್ಯ ಅವರಿಗೆ ಧಮ್ ಇದ್ದರೆ ಚಿದಂಬರಂ ಮುಂದೆ ನಿಂತು ಮಾತನಾಡಲಿ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮಾಜಿ ಸಿಎಂ ಸಿದ್ದರಾಮಯ್ಯಗೆ ಸವಾಲು ಹಾಕಿದ್ದಾರೆ.
ಮಡಿಕೇರಿಯಲ್ಲಿ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸಭೆಗೆ ಆಗಮಿಸಿದ ಸಂದರ್ಭ ಅವರು ಮಾಧ್ಯಮಗಳ ಜೊತೆಗೆ ಮಾತನಾಡಿದರು. ಕೊರೊನಾಗೆ ಲಸಿಕೆ ಬಂದಾಗ ಆತ್ಮ ನಿರ್ಭರ ಭಾರತ ಅಡಿಯಲ್ಲಿ ಯಾವೆಲ್ಲಾ ರಾಜ್ಯಗಳಿಗೆ ಹೇಗೆ ತಲುಪಿಸಬೇಕೋ ಹಾಗೆ ತಲುಪಿಸುತ್ತೇವೆ. ಅದನ್ನು ಯಾರಿಂದಲೂ ಹೇಳಿಸಿಕೊಳ್ಳಬೇಕಾದ ಅಗತ್ಯವಿಲ್ಲ ಎಂದಿದ್ದಾರೆ.
ಸಿದ್ದರಾಮಯ್ಯ ಮೊದಲು ಸಂಸ್ಕಾರ ಮತ್ತು ಸಂಸ್ಕೃತಿ ಇಟ್ಟುಕೊಂಡು ಮಾತನಾಡುವುದನ್ನು ಕಲಿಯಬೇಕು ಎಂದು ತಿರುಗೇಟು ನೀಡಿದರು. ರಾಜ್ಯದಲ್ಲಿ ನಡೆಯುತ್ತಿರುವ ಆರ್.ಆರ್ ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ನಳಿನ್ ಕುಮಾರ್ ಕಟೀಲ್, ಎರಡೂ ಕ್ಷೇತ್ರಗಳಲ್ಲಿಯೂ ನಮ್ಮ ಅಭ್ಯರ್ಥಿಗಳು ಅಭೂತಪೂರ್ವ ಗೆಲುವು ಸಾಧಿಸಲಿದ್ದಾರೆ. ರಾಜ್ಯದಲ್ಲಿ ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷವನ್ನು ಸಂಘಟಿಸುವ ಕೆಲಸ ಮಾಡುತ್ತಿದ್ದೇವೆ ಎಂದಿದ್ದಾರೆ.