ಕೊಡಗು: ಕೊರೊನಾ ವೈರಸ್ ಗೆ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜಿಲ್ಲೆಯಲ್ಲಿ ಇಂದು ಮತ್ತೊಬ್ಬರು ಬಲಿಯಾಗಿದ್ದಾರೆ.
ಮಡಿಕೇರಿ ನಗರದ ಗೌಡ ಸಮಾಜ ಸಮೀಪದ 90 ವರ್ಷದ ವೃದ್ಧ ಕೊರೊನಾದಿಂದ ಮೃತಪಟ್ಟಿದ್ದಾರೆ. ಇವರು ಮೊದಲಿನಿಂದ ಅಧಿಕ ರಕ್ತದೊತ್ತಡ ಮತ್ತು ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದರು. ಸೆಪ್ಟೆಂಬರ್ 1 ರಂದು ಕಾಲು ಮತ್ತು ಹೊಟ್ಟೆ ಊದಿದ್ದರಿಂದ ಚಿಕಿತ್ಸೆಗಾಗಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೆ.2 ರಂದು ವೃದ್ಧನಿಗೆ ಕೊರೊನಾ ವೈರಸ್ ತಗುಲಿರುವುದು ದೃಢಪಟ್ಟಿತ್ತು.
ಕೊರೊನಾ ದೃಢಪಡುತ್ತಿದ್ದಂತೆ ಅವರನ್ನು ಮಡಿಕೇರಿಯ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ. ಮೃತ ವೃದ್ಧನ ಅಂತ್ಯಕ್ರಿಯೆಯನ್ನು ಸರ್ಕಾರದ ಮಾರ್ಗಸೂಚಿಯಂತೆ ಜಿಲ್ಲಾಡಳಿತ ನಡೆಸಲಿದೆ.
ಜಿಲ್ಲೆಯಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 26 ಕ್ಕೆ ಏರಿಕೆಯಾಗಿದೆ. ಇದುವರೆಗೆ 1,888 ಜನರಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದು, 1,531 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ಜಿಲ್ಲೆಯಲ್ಲಿ 331 ಸಕ್ರಿಯ ಪ್ರಕರಣಗಳಿವೆ.