ಕೊಡಗು : ಕೋವಿಡ್ ಲಸಿಕೆ ಸಂಗ್ರಹಕ್ಕೆ ಬೇಕಾದ ಅಗತ್ಯ ಸಿದ್ಧತೆಗಳನ್ನು ಇಲಾಖೆಯಿಂದ ಮಾಡಿಕೊಂಡಿದ್ದೇವೆ ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಮೋಹನ್‌ಕುಮಾರ್ ತಿಳಿಸಿದ್ದಾರೆ.
ರಾಜ್ಯ ಸರ್ಕಾರದಿಂದ ಎಷ್ಟು ಪ್ರಮಾಣದಲ್ಲಿ ಲಸಿಕೆ ಕೊಡಬೇಕು. ಎಷ್ಟು ಉಷ್ಣಾಂಶದಲ್ಲಿ ಲಸಿಕೆ ಸಂಗ್ರಹಿಸಬೇಕು. ಹಾಗೆಯೇ ಎಂದಿನಿಂದ ಪ್ರಾರಂಭಿಸಬೇಕು ಎನ್ನುವ ಬಗ್ಗೆ ಮಾರ್ಗಸೂಚಿಗಳು ಬಂದಿಲ್ಲ. ಆದರೆ, ಜಿಲ್ಲಾಡಳಿತ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಕೊರೊನಾ ವಿರುದ್ಧದ ಹೋರಾಟಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.
ನಂತರ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸುಮಾರು 5,439 ಕೊರೊನಾ ವಾರಿಯರ್ಸ್ ಇದ್ದಾರೆ. ಮೊದಲ ಹಂತದಲ್ಲಿ ಅವರಿಗೆ ಲಸಿಕೆ ನೀಡಲಾಗುವುದು. ಡಿಹೆಚ್‌ಒ ಕಚೇರಿಯ ಒಂದು ಹಾಲ್‌ನಲ್ಲಿ ಕೋವಿಡ್ ಲಸಿಕೆ ಸಂಗ್ರಹಕ್ಕೆ ವ್ಯವಸ್ಥೆ ಮಾಡಿಕೊಂಡಿದ್ದೇವೆ.
ತಾಲೂಕು ಮಟ್ಟದಲ್ಲೂ ವ್ಯಾಕ್ಸಿನ್ ಸಂಗ್ರಹಕ್ಕೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಅಲ್ಲದೆ ಜಿಲ್ಲೆಯಲ್ಲಿ 29 ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ಸಂಗ್ರಹಕ್ಕೆ ಅಗತ್ಯ ಸಿದ್ಧತೆ ಮಾಡಲಾಗಿದೆ. ಅವಶ್ಯಕತೆಗೆ ತಕ್ಕಂತೆ ಹೆಚ್ಚಿನ ಅಗತ್ಯ ಸಲಕರಣೆಗಳನ್ನು ವ್ಯವಸ್ಥೆ ಮಾಡಿಕೊಳ್ಳುತ್ತೇವೆ ಎಂದು ತಿಳಿಸಿದರು.