ಕೊಡಗು: ಸರ್ಕಾರ ಮತ್ತು ಸ್ಥಳೀಯ ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಅಂಗನವಾಡಿ ಕೇಂದ್ರವೊಂದು ದನದ ಕೊಟ್ಟಿಗೆಯ ಪಕ್ಕದಲ್ಲೇ ಕಾರ್ಯ ನಿರ್ವಹಿಸುವಂತಾಗಿದೆ.
ಸೋಮವಾರಪೇಟೆ ತಾಲೂಕಿನ ಹೆಮ್ಮನೆ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಇಂತಹ ಪರಿಸ್ಥಿತಿ ಇದ್ದು, ಹೆಚ್ಚಾಗಿ ಕೂಲಿ ಕಾರ್ಮಿಕರು ಹಾಗೂ ಬಡ ವರ್ಗದವರನ್ನೇ ಹೊಂದಿರುವ ಹೆಮ್ಮನೆ ಗ್ರಾಮಸ್ಥರು ತಮ್ಮ ಮಕ್ಕಳನ್ನು ಅಂಗನವಾಡಿಗೆ ಕಳುಹಿಸುತ್ತಾರೆ.
ಗ್ರಾಮದಲ್ಲಿ 2007ರಲ್ಲಿ ಅಂಗನವಾಡಿ ಕೇಂದ್ರ ಸ್ಥಾಪಿಸಲಾಯಿತು. ಅಂದಿನಿಂದ ಇಂದಿನವರೆಗೂ ಅಂಗನವಾಡಿ ಕೇಂದ್ರಕ್ಕೆ ಸ್ವಂತ ಕಟ್ಟಡ ಇಲ್ಲದೇ ಗ್ರಾಮದ ಪುಟ್ಟ ಬಾಡಿಗೆ ಮನೆಯಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಅಂಗನವಾಡಿ ಕೇಂದ್ರಕ್ಕೆ ಸರಿಯಾದ ಕಟ್ಟಡದ ವ್ಯವಸ್ಥೆ ಇಲ್ಲದ ಹಿನ್ನೆಲೆಯಲ್ಲಿ ಕಳೆದ 12 ವರ್ಷಗಳಲ್ಲಿ 4 ಬಾರಿ ಅಂಗನವಾಡಿ ಕೇಂದ್ರವನ್ನು ಸ್ಥಳಾಂತರಿಸಲಾಗಿದೆ.
ಪೋಷಕರು ಮಕ್ಕಳನ್ನು ಅಂಗನವಾಡಿಗೆ ಸೇರಿಸಲು ಆಸಕ್ತಿ ತೋರುತ್ತಿದ್ದಾರೆ. ಆದರೆ, ಪ್ರತಿ ಬಾರಿಯೂ ಸ್ಥಳಾಂತರವಾಗುತ್ತಿರುವ ಅಂಗನವಾಡಿ ಕೇಂದ್ರಕ್ಕೆ ಸರಿಯಾದ ಕಟ್ಟಡ ವ್ಯವಸ್ಥೆ ಇಲ್ಲದೆ ಕಿರಿದಾದ ಕೊಠಡಿಯಲ್ಲೇ ಮಕ್ಕಳನ್ನು ಕೂರಿಸುವುದು, ಮತ್ತೊಂದು ಬದಿಯಲ್ಲಿ ಅಡುಗೆ ಮಾಡುವುದು ಪರಿಪಾಠವಾಗಿದೆ. ಇದರಿಂದ ಅಂಗನವಾಡಿ ಮಕ್ಕಳು ಸೇರಿದಂತೆ ಶಿಕ್ಷಕಿ, ಸಹಾಯಕಿಯರೂ ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ. ಈ ಬಗ್ಗೆ ಹಲವು ವರ್ಷಗಳಿಂದ ಅಂಗನವಾಡಿ ಶಿಕ್ಷಕಿಯರು ಸಂಬಂಧಪಟ್ಟ ಅಧಿಕಾರಿಗಳು ಗ್ರಾಮ ಪಂಚಾಯತ್ ಹಾಗೂ ಸ್ಥಳೀಯ ಜನಪ್ರತಿನಿಧಿಗಳಿಗೆ ತಿಳಿಸಿ ಸ್ವಂತ ಕಟ್ಟಡ ನಿರ್ಮಾಣಕ್ಕೆ ಜಾಗ ಕೇಳಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಅಂಗನವಾಡಿ ಸಿಬ್ಬಂದಿ ಅಳಲು ತೋಡಿಕೊಂಡಿದ್ದಾರೆ.