ಕೊಡಗು: ದುಬೈನಿಂದ ಬಂದಿದ್ದ ವ್ಯಕ್ತಿಯ ವೈದ್ಯಕೀಯ ವರದಿ ಲಭ್ಯವಾಗಿದ್ದು, ವರದಿಯಲ್ಲಿ ಯಾವುದೇ ಕೊರೊನಾ ವೈರಸ್ ಲಕ್ಷಣಗಳು ಕಂಡುಬಂದಿಲ್ಲ ಎಂದು ಜಿಲ್ಲಾಧಿಕಾರಿ ಅನೀಸ್ ಕೆ.ಜಾಯ್ ತಿಳಿಸಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾರ್ಚ್ 9ರಂದು ದುಬೈನಿಂದ ಬಂದಿದ್ದ ವ್ಯಕ್ತಿಗೆ ಕೆಮ್ಮು, ಶೀತ ಮತ್ತು ತೀವ್ರ ಜ್ವರ ಕಾಣಿಸಿಕೊಂಡಿತ್ತು. ಹೀಗಾಗಿ ಈ ಜಿಲ್ಲಾಸ್ಪತ್ರೆಯಲ್ಲಿ ಆತನನ್ನು ದಾಖಲಿಸಲಾಗಿತ್ತು. ಬಳಿಕ ಗಂಟಲ ದ್ರವ ಮತ್ತು ರಕ್ತದ ಮಾದರಿ ಲ್ಯಾಬ್‌ಗೆ ಕಳುಹಿಸಲಾಗಿತ್ತು. ಇದೀಗ ನೆಗಟಿವ್ ವರದಿ ಬಂದಿದೆ ಎಂದು ಡಿಸಿ ಸ್ಪಷ್ಟಪಡಿಸಿದ್ದಾರೆ.
ಮತ್ತೊಮ್ಮೆ ದೃಢಪಡಿಸಿಕೊಳ್ಳಲು ವರದಿಯನ್ನು ಪುಣೆಗೆ ಕಳುಹಿಸಲಾಗಿದೆ. ಸದ್ಯ ವ್ಯಕ್ತಿಯನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಆದರೂ ಮನೆಯಲ್ಲಿ ತೀವ್ರ ನಿಗಾ ಇರಿಸಲಾಗಿದೆ. ಮತ್ತಿಬ್ಬರಿಗೆ ಸೋಂಕು ಶಂಕೆ ಹಿನ್ನೆಲೆ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿನ್ನೆ ಇರಾಕ್ನಿಂದ ಬಂದ ನಾಲ್ವರನ್ನು ಐಸೋಲೇಷನ್ ವಾರ್ಡ್ನಲ್ಲಿ ಇರಿಸಲಾಗಿದೆ. ಒಟ್ಟು 156 ಮಂದಿ ಮೇಲೆ ಮನೆಯಲ್ಲಿ ನಿಗಾ ಇರಿಸಲಾಗಿದೆ ಎಂದು ತಿಳಿಸಿದರು.