ಮಡಿಕೇರಿ: ಕಟ್ಟಡ ಕಾಮಗಾರಿ ನಡೆಸುತ್ತಿದ್ದ ಸಂದರ್ಭದಲ್ಲಿ ದಿಢೀರ್ ಬರೆ ಕುಸಿದು ಮೂವರು ಕಾರ್ಮಿಕರು ಮಣ್ಣಿನಡಿ ಸಿಲುಕಿ ಮೃತಪಟ್ಟಿರುವ ಘಟನೆ ಮಡಿಕೇರಿ ನಗರದ ಸ್ಟೀವರ್ಟ್ ಹಿಲ್ ಬಡಾವಣೆಯಲ್ಲಿ ಇಂದು ನಡೆಯಿತು. ಮೂವರ ಪೈಕಿ ಒಬ್ಬರ ಶವ ಹೊರತೆಗೆಯಲಾಗಿದೆ. ಇನ್ನೂ ಇಬ್ಬರ ಶವಗಳನ್ನು ಹೊರತೆಗೆಯಲು ಅಗ್ನಿ ಶಾಮಕ ದಳ ಮತ್ತು ಪೋಲಿಸ್ ಇಲಾಖೆ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ನಿವಾಸಿಗಳಾದ ಬಸಪ್ಪ, ನಿಂಗಪ್ಪ ಹಾಗೂ ಆನಂದ ಮೃತ ದುರ್ದೈವಿಗಳು. ಖಾಸಗಿ ವ್ಯಕ್ತಿಯೊಬ್ಬರ ಜಾಗದಲ್ಲಿ ತಡೆಗೋಡೆ ನಿರ್ಮಾಣಕ್ಕೆ ಮಣ್ಣು ತೆಗೆಯುತ್ತಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ. ಅದೃಷ್ಟವಶಾತ್ ಕಾರ್ಮಿಕ ರಾಜು ಎಂಬವರು ಇತರ ಕಾರ್ಮಿಕರ ಸಹಕಾರದಿಂದ ಮೇಲೆ ಬಂದು ಜೀವ ಉಳಿಸಿಕೊಂಡಿದ್ದಾರೆ.
ಉಳಿದ ಮೂವರು ಮಣ್ಣಿನಡಿ ಸಿಲುಕಿಕೊಂಡ ಪರಿಣಾಮ ಮೇಲೆ ಬರಲಾಗದೇ ಪ್ರಾಣ ಕಳೆದುಕೊಂಡಿದ್ದಾರೆ. ಸುಮಾರು 9 ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದರು. ಘಟನೆ ನಡೆದ ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಹಾಗೂ ಅಗ್ನಿ ಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯ ನಡೆಸಿದರು. ಮೃತದೇಹವನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ, ಸದಸ್ಯರುಗಳು ಹಾಗೂ ಅಧಿಕಾರಿಗಳು ಕಾರ್ಯಾಚರಣೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಇದನ್ನೂ ಓದಿ: ಹುಬ್ಬಳ್ಳಿ: ಬರದ ಬೇಗೆಯಲ್ಲಿ ಬೆಂದ ಭುವಿಗೆ ವರುಣ ಸಿಂಚನ