ಕೊಡಗು: ಜಿಲ್ಲೆಯ ವೀರಾಜಪೇಟೆ ತಾಲೂಕಿನ ಮಾಲ್ದಾರೆಯ ಸರ್ಕಾರಿ ಶಾಲೆಯ ಆಟದ ಮೈದಾನದಲ್ಲಿ ಹುಲಿ ಹೆಜ್ಜೆ ಗುರುತು ಪತ್ತೆಯಾಗಿದ್ದು, ವಿದ್ಯಾರ್ಥಿಗಳು, ಸಾರ್ವಜನಿಕರು ಆತಂಕಕ್ಕೆ ಒಳಗಾಗಿದ್ದಾರೆ. ಶಾಲೆಯ ಸಮೀಪದ ಆಟದ ಮೈದಾನದಲ್ಲಿ ಹುಲಿಯ ಹೆಜ್ಜೆ ಗುರುತನ್ನು ಸ್ಥಳೀಯರು ಪತ್ತೆ ಹಚ್ಚಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ತಡರಾತ್ರಿ ಹುಲಿ ಬಂದಿರಬಹುದು ಎಂದು ಶಂಕಿಸಿದ್ದಾರೆ. ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹೆಚ್ಚಾಗಿ ಕೂಲಿ ಕಾರ್ಮಿಕರು ವಾಸವಿದ್ದು, ಕಾರ್ಮಿಕರ ಮಕ್ಕಳು ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಾರೆ. ಅಲ್ಲದೇ ಸ್ಥಳೀಯ ಕಾಫಿ ತೋಟಗಳ ಲೈನ್ ಮನೆಗಳಲ್ಲಿವಾಸವಿರುವ ಕಾರ್ಮಿಕರ ಮಕ್ಕಳು ತೋಟದ ರಸ್ತೆಯಲ್ಲಿ ಜನ ನಿಬೀಡ ಪ್ರದೇಶಗಳಿಂದ ಕಾಲ್ನಡಿಗೆಯಲ್ಲಿ ಸಂಚರಿಸುತ್ತಿದ್ದು, ಈ ವ್ಯಾಪ್ತಿಯಲ್ಲಿ ಹುಲಿಯ ಪ್ರತ್ಯಕ್ಷ ತೀವ್ರ ಆತಂಕಕ್ಕೆ ಎಡೆಮಾಡಿದೆ.
ಮಾಲ್ದಾರೆ ಗ್ರಾ.ಪಂ ಉಪಾಧ್ಯಕ್ಷೆ ಪುಷ್ಪಾ ಮಾತನಾಡಿ, ಈ ವ್ಯಾಪ್ತಿಯಲ್ಲಿ ಹುಲಿಯ ಹಾವಳಿ ಹೆಚ್ಚಾಗಿದೆ. ಗ್ರಾಮಸ್ಥರು ಭಯದಿಂದ ಬದುಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದೀಗ ಶಾಲೆಯ ಆವರಣದಲ್ಲಿಯೇ ಹುಲಿಯ ಹೆಜ್ಜೆ ಗುರುತು ಕಂಡು ಬಂದಿರುವುದು ಗ್ರಾಮಸ್ಥರನ್ನು ಇನ್ನಷ್ಟು ಆತಂಕಕ್ಕೀಡು ಮಾಡಿದೆ. ಸರ್ಕಾರ ಹಾಗೂ ಅರಣ್ಯ ಇಲಾಖೆ ಎಚ್ಚೆತ್ತು ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.