ಕೊಡಗು: ಕೊರೊನಾ ಸಂದಿಗ್ಧ ಪರಿಸ್ಥಿತಿಯಲ್ಲಿ ಪಿಯುಸಿ ಇಂಗ್ಲಿಷ್ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಶಿವಲಿಂಗಪ್ಪ ಶೆಟ್ಟಿ ತಿಳಿಸಿದ್ದಾರೆ.
ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜಿಲ್ಲಾಧಿಕಾರಿ ಅವರ ಮಾರ್ಗದರ್ಶನದಂತೆ ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಸ್ಯಾನಿಟೈಸ್ ಮಾಡಲಾಗಿದೆ. ಪರೀಕ್ಷೆಯ ಅವಧಿಗೂ ಮೊದಲು ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಥರ್ಮಲ್ ಸ್ಕ್ಯಾನಿಂಗ್ ಮಾಡಲಾಗುವುದು. ಜೊತೆಗೆ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸೂಚಿಸಿದ್ದು, ಇವುಗಳನ್ನು ಕಡ್ಡಾಯವಾಗಿ ಅನುಸರಿಸಲು ಮೇಲ್ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿದರು.
ಜಿಲ್ಲೆಯಾದ್ಯಂತ 14 ಪರೀಕ್ಷಾ ಕೇಂದ್ರಗಳಲ್ಲಿ ಬಾಕಿ ಉಳಿದಿರುವ ಪಿಯುಸಿಯ ಆಂಗ್ಲಭಾಷೆ ಪರೀಕ್ಷೆ ನಡೆಯಲಿದೆ. ಒಟ್ಟು 5927 ವಿದ್ಯಾರ್ಥಿಗಳು ಪರಿಕ್ಷೆಗೆ ಹಾಜರಾಗಲಿದ್ದು, 477 ಹೊರ ಜಿಲ್ಲೆಯಿಂದ ಹಾಗೂ ನಮ್ಮ ಜಿಲ್ಲೆಯಿಂದ 35 ವಿದ್ಯಾರ್ಥಿಗಳು ಬೇರೆಗೆ ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಹೊರ ರಾಜ್ಯದ 10 ವಿದ್ಯಾರ್ಥಿಗಳಲ್ಲಿ 9 ಮಂದಿ ಕೇರಳ ಹಾಗೂ ಒಬ್ಬ ವಿದ್ಯಾರ್ಥಿ ತಮಿಳುನಾಡು ರಾಜ್ಯದಿಂದ ಪರಿಕ್ಷೆಗೆ ಆಗಮಿಸುವರು ಎಂದು ಹೇಳಿದರು.
ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಲು ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಯಾವ ಭಾಗದಿಂದ ವಿದ್ಯಾರ್ಥಿಗಳು ಬರುತ್ತಾರೆ ಎಂಬುದನ್ನು ಸಾರಿಗೆ ಇಲಾಖೆಗೆ ಮಾಹಿತಿ ನೀಡಿದ್ದು, ಸರ್ಕಾರದ ಆದೇಶದಂತೆ ಸಾರಿಗೆ ಇಲಾಖೆಯೂ ಅಗತ್ಯವಾದ ಬಸ್ ವ್ಯವಸ್ಥೆ ಮಾಡಿದೆ. ಅಂತರ್ ರಾಜ್ಯದಿಂದ ಆಗಮಿಸುವ ವಿದ್ಯಾರ್ಥಿಗಳಿಗೆ ಈ-ಪಾಸ್ ವ್ಯವಸ್ಥೆ ಮಾಡಲಾಗಿದೆ. ಗಡಿ ಪ್ರವೇಶದ ಮೊದಲು ಅಗತ್ಯ ದಾಖಲಾತಿಗಳನ್ನು ಸಲ್ಲಿಸಬೇಕಿದ್ದು, ಈಗಾಗಲೇ ಕೇರಳ ಹಾಗೂ ತಮಿಳುನಾಡಿನ ಇಬ್ಬರು ವಿದ್ಯಾರ್ಥಿಗಳ ಮಾಹಿತಿಯನ್ನು ಜಿಲ್ಲಾಡಳಿತಕ್ಕೆ ನೀಡಲಾಗಿದೆ ಎಂದರು.
ಪರೀಕ್ಷಾ ಕೇಂದ್ರಗಳಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಇಲಾಖೆಯ ನಿರ್ದೇಶನದಂತೆ ಬಹುತೇಕ ಪರಿಕ್ಷಾ ಕೇಂದ್ರಗಳಿಗೆ ಸ್ಯಾನಿಟೈಸರ್ ಮಾಡಲಾಗಿದೆ. ನಾಳೆ ಹಾಜರಾಗುವ ವಿದ್ಯಾರ್ಥಿಗಳಿಗೆ ಥರ್ಮಲ್ ಸ್ರ್ಕ್ರೀನಿಂಗ್ ಹಾಗೂ ಕಡ್ಡಾಯವಾಗಿ ಮಾಸ್ಕ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗುವುದು. ಈಗಾಗಲೇ ಇಲಾಖೆಯ ಸೂಚನೆಗಳನ್ನು ಕಾಲೇಜು ಆಡಳಿತ ಮಂಡಳಿ ಶಿಸ್ತಿನಿಂದ ಪಾಲಿಸಲಾಗುತ್ತಿದೆ ಎಂದರು.