ಕೋಲಾರ: ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾದ ಬಳಿಕ 9 ದಿನದಲ್ಲಿ ಇದುವರೆಗೂ ಒಟ್ಟು 101 ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ದಾಖಲಾಗಿವೆ ಎಂದು ಕೋಲಾರ ಜಿಲ್ಲಾಧಿಕಾರಿ ಜೆ.ಮಂಜುನಾಥ್ ಹೇಳಿದರು.
ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದುವರೆಗೂ ದಾಖಲಾದ 101 ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳಲ್ಲಿ 6 ಲಕ್ಷದ 48 ಸಾವಿರ ರೂ. ಹಣ ಹಾಗೂ 11 ಲಕ್ಷ ರೂ. ಮೌಲ್ಯದ ಮದ್ಯವನ್ನ ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ಕೋಲಾರ ಜಿಲ್ಲೆ ಆಂಧ್ರ ಹಾಗೂ ತಮಿಳುನಾಡು ರಾಜ್ಯಗಳಿಗೆ ಹೊಂದಿಕೊಂಡಿದ್ದು, ಈಗಾಗಲೇ ಅಕ್ರಮಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ 18 ಅಂತಾರಾಜ್ಯ ಚೆಕ್ ಪೋಸ್ಟ್‍ಗಳು ಹಾಗೂ 24 ಫ್ಲೈಯಿಂಗ್ ಸ್ಕ್ವಾಡ್‍ಗಳನ್ನ ನೇಮಕ ಮಾಡಲಾಗಿದೆ. ಇದರಲ್ಲಿ ಪ್ರತ್ಯೇಕ ಮೂರು ಪ್ರಕರಣಗಳಲ್ಲಿ 6,48,750 ರೂ. ದಾಖಲೆ ಇಲ್ಲದೆ ಸಾಗಾಟ ಮಾಡುತ್ತಿದ್ದ ಹಣವನ್ನ ವಶಕ್ಕೆ ಪಡೆಯಲಾಗಿದೆ. ಜೊತೆಗೆ ಇದುವರೆಗೂ 11 ಲಕ್ಷ ರೂ. ಮೂಲ್ಯದ 3,394 ಲೀಟರ್ ಮದ್ಯವನ್ನ ಹಾಗೂ 6 ದ್ವಿಚಕ್ರ ವಾಹನಗಳನ್ನ ವಶಪಡಿಸಿಕೊಳ್ಳಲಾಗಿದೆ. ಇನ್ನು ಚುನಾವಣಾ ಅಧಿಕಾರಿಗಳಿಗೆ ದೊಡ್ಡ ಸವಾಲಾಗಿದ್ದು, ಚುನಾವಣೆ ಕಾರ್ಯ ಆರಂಭವಾದಾಗಿನಿಂದ ಫಲಿತಾಂಶ ಬರುವವರೆಗೂ ಬಹಳ ಸೂಕ್ಷ್ಮವಾಗಿ ಕಾರ್ಯನಿರ್ವಹಿಸಬೇಕಾಗಿದ್ದು, ಜಿಲ್ಲಾಡಳಿತ ಸಜ್ಜಾಗಿದೆ ಎಂದರು.
ನಿನ್ನೆಯಿಂದ ಅಧಿಸೂಚನೆ ಜಾರಿಯಾಗಿದ್ದು, ನಾಮಪತ್ರ ಸಲ್ಲಿಕೆಗೆ ಅವಕಾಶವಿರುತ್ತದೆ. ಆದರೆ ಮಂಗಳವಾರ ಅಶುಭ ಎಂದು ಯಾವೊಬ್ಬ ಅಭ್ಯರ್ಥಿಯೂ ನಾಮಪತ್ರ ಸಲ್ಲಿಕೆಗೆ ಮುಂದಾಗಿರಲಿಲ್ಲ. ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದ್ದು, ಚುನಾವಣೆ ಕಾರ್ಯದ ಮೇಲೆ ಕಂದಾಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಹದ್ದಿನ ಕಣ್ಣಿಟ್ಟಿದೆ ಎಂದರು.