ಕೋಲಾರ: ಜಿಲ್ಲೆಯಲ್ಲಿ ಇಬ್ಬರು ವೈದ್ಯರು ಹಾಗೂ ಇಬ್ಬರು ಸಿಬ್ಬಂದಿಯಲ್ಲಿ ಕೊರೊನಾ ಸೋಂಕು ದೃಢವಾದ ಹಿನ್ನೆಲೆ ಅವರೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದ 70 ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ.
ಹಗಲಿರುಳು ಶ್ರಮಿಸುತ್ತಿರುವ ಕೊರೊನಾ ವಾರಿಯರ್ಸ್ಗೆ ಸೋಂಕು ಬಿಟ್ಟು ಬಿಡದೆ ಕಾಡುತ್ತಿದೆ. ಈ ಹಿಂದೆ ಆರ್. ಎಲ್. ಜಾಲಪ್ಪ ಆಸ್ಪತ್ರೆ ಸಿಬ್ಬಂದಿಯಲ್ಲಿ ಕಾಣಿಸಿಕೊಂಡಿದ್ದ ಕೊರೊನಾ ಇದೀಗ ಸರ್ಕಾರಿ ಆಸ್ಪತ್ರೆ ವೈದ್ಯರಿಗೂ ವಕ್ಕರಿಸಿದೆ. ಕೊರೊನಾಗೆ ಚಿಕಿತ್ಸೆ ನೀಡಿದ ವೈದ್ಯ ಸೇರಿ ಸಿಬ್ಬಂದಿಗೆ ಸೋಂಕು ದೃಢಪಟ್ಟಿದೆ. ಜಿಲ್ಲಾಸ್ಪತ್ರೆಯಲ್ಲಿ 29 ಮಂದಿ ಪ್ರಾಥಮಿಕ ಸಂಪರ್ಕಿತರು ಮತ್ತು ಸರ್ವೇಕ್ಷಣಾಧಿಕಾರಿ ಕಚೇರಿಯಲ್ಲಿ 8 ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ. ಜಿಲ್ಲಾಸ್ಪತ್ರೆ ವೈದ್ಯಾಧಿಕಾರಿಗಳು ಸೇರಿ ಜಿಲ್ಲೆಯ ಕೆಜಿಎಫ್, ಮಾಲೂರು, ಬಂಗಾರಪೇಟೆ ಸರ್ಕಾರಿ ಆಸ್ಪತ್ರೆ ವೈದ್ಯರು, ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ.
ಜಿಲ್ಲೆಯಾದ್ಯಂತ ಇದುವರೆಗೆ ಸುಮಾರು 60 ರಿಂದ 70 ಜನ ಸರ್ಕಾರಿ ವೈದ್ಯರು ಹಾಗೂ ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ. ಮಾತ್ರವಲ್ಲ, 2 ದಿನದ ಹಿಂದೆ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ಪಿ-2684 ಗರ್ಭಿಣಿಗೆ ಹೆರಿಗೆ ಮಾಡಿಸಿದ ಬಳಿಕ ವೈದ್ಯೆಗೂ ಸೋಂಕು ಕಾಣಿಸಿಕೊಂಡಿದೆ. ನಂತರ ಹೆರಿಗೆ ಮಾಡಿಸಿದ್ದ ವೈದ್ಯರು ಮತ್ತು ಸಿಬ್ಬಂದಿಯನ್ನ ಕ್ವಾರಂಟೈನ್ ಮಾಡಲಾಗಿದೆ. ಆಸ್ಪತ್ರೆಯಲ್ಲಿ ಸೋಂಕು ನಿವಾರಕ ಸಿಂಪಡನೆ ಮಾಡಿ, ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಸ್ಪತ್ರೆ ಸೇರಿದಂತೆ ಸರ್ವೇಕ್ಷಣಾಧಿಕಾರಿಗಳ ಕಚೇರಿಗೆ ಸ್ಯಾನಿಟೈಸರ್ ಸಿಂಪಡಣೆ ಮಾಡಲಾಗಿದೆ.
ಜಿಲ್ಲೆಯಲ್ಲಿ ಇದುವರೆಗೂ ಒಟ್ಟು 139 ಮಂದಿಗೆ ಸೋಂಕು ದೃಢಪಟ್ಟಿದ್ದು, ಮೂವರು ಮೃತಪಟ್ಟಿದ್ದಾರೆ.