ಕೋಲಾರ: ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಗಡಿ ಪ್ರದೇಶ ದಿನ್ನೂರು ಗ್ರಾಮದ ಬಳಿ ಆನೆ ದಾಳಿಗೆ ವ್ಯಕ್ತಿ ಬಲಿಯಾಗಿದ್ದು, ಸ್ಥಳೀಯರು ಆತಂಕಕ್ಕೊಳಗಾಗಿದ್ದಾರೆ.
ಬೊಯಲೂರು ಗ್ರಾಮದ ವೆಂಕಟೇಶಪ್ಪ (50) ಮೃತ ವ್ಯಕ್ತಿ. ರಾತ್ರಿ ಪಾಳಿಯ ಕೆಲಸ ಮುಗಿಸಿಕೊಂಡು ಮನೆಗೆ ಹಿಂತಿರುಗುವ ಸಂದರ್ಭದಲ್ಲಿ ಕಾಡಾನೆಗಳು ದಾಳಿ ಮಾಡಿದ್ದು, ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯನ್ನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಇನ್ನು ಕಳೆದ ಹತ್ತು ದಿನಗಳಿಂದ ದಿನ್ನೂರು ಗ್ರಾಮದ ಸುತ್ತುಮುತ್ತ ಸುಮಾರು ಆರು ಆನೆಗಳು ಬೀಡು ಬಿಟ್ಟಿದ್ದು, ಸುತ್ತಮುತ್ತಲಿನ ಗ್ರಾಮದ ರೈತರ ನೂರಾರು ಎಕರೆ ಬೆಳೆ ನಾಶ ಮಾಡಿವೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು, ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.