ಕೋಲಾರ: ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಕಾಡಾನೆಗಳ ಹಿಂಡೊಂದು ದಾಳಿ ನಡೆಸಿದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ಮಾಲೂರು ತಾಲೂಕಿನ ನೂಟವೆ ಗ್ರಾಮದ ಬಳಿ ನಡೆದಿದೆ.
ಅರಣ್ಯ ಇಲಾಖೆ ಸಿಬ್ಬಂದಿ ಗುಟ್ಟಮುನಿಯಪ್ಪ ಹಾಗೂ ಕೊಮ್ಮನಹಳ್ಳಿ ಗ್ರಾಮದ ನಿವಾಸಿ ಆನಂದ್ ಎಂಬುವರ ಮೇಲೆ ಕಾಡಾನೆಗಳು ದಾಳಿ ಮಾಡಿದ್ದವು. ಇಬ್ಬರನ್ನೂ ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ.
ಇನ್ನು ಕಳೆದ ಒಂದು ತಿಂಗಳಿನಿಂದ ಕೋಲಾರದ ಗಡಿ ಭಾಗಗಳಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆಗಳನ್ನ ನಾಶ ಮಾಡುತ್ತಿವೆ. ಆನೆಗಳನ್ನು ಹಿಮ್ಮೆಟ್ಟಿಸಲು ಸತತ ಒಂದು ತಿಂಗಳಿನಿಂದ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಪ್ರಯತ್ನಿಸುತ್ತಿದ್ದಾರೆ. ಅದರಂತೆ ಇಂದೂ ಕೂಡ ಆನೆಗಳನ್ನು ಹಿಮ್ಮೆಟ್ಟಿಸುವ ವೇಳೆ ಕಾಡಾನೆಗಳು ದಾಳಿ ನಡೆಸಿದ ಪರಿಣಾಮ ಈ ದುರಂತ ಸಂಭವಿಸಿದೆ.