ಕೋಲಾರ: ಮುಂದಿನ ವಿಧಾನಸಭಾ ಚುನಾವಣೆಗೆ ಕೋಲಾರ ವಿಧಾನಸಭಾ ಕ್ಷೇತ್ರದಿಂದ ಕಣಕ್ಕೆ ಇಳಿಯುವುದಾಗಿ ಮಾಜಿ ಶಾಸಕ ಕೊತ್ತೂರು ಜಿ.ಮಂಜುನಾಥ್ ಸ್ಪಷ್ಟಪಡಿಸಿದರು.
ಇತ್ತೀಚೆಗೆ ಅಬಕಾರಿ ಸಚಿವ ಹೆಚ್.ನಾಗೇಶ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದ ಅವರು, ಮುಂದಿನ ಚುನಾವಣೆಯಲ್ಲಿ ನನ್ನ ಅಭ್ಯರ್ಥಿಯನ್ನು ಮುಳಬಾಗಲು ಕ್ಷೇತ್ರದಿಂದ ಕಣಕ್ಕಿಳಿಸುವುದಾಗಿ ಹೇಳಿದರು.
ನಗರದ ಸರ್ಕಾರಿ ಬಾಂಗ್ಲಾ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಶಿಕ್ಷಕರಿಂದ ಸನ್ಮಾನ ಸ್ವೀಕರಿಸಿದ ಬಳಿಕ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಹೊಸ ಅಭ್ಯರ್ಥಿಯನ್ನು ಮುಳಬಾಗಲು ವಿಧಾನಸಭಾ ಕ್ಷೇತ್ರದಲ್ಲಿ ಕಣಕ್ಕೆ ಇಳಿಸಿ ಅವರ ಪರವಾಗಿ ಪ್ರಚಾರ ಕೈಗೊಳ್ಳುತ್ತೇನೆ ಎಂದು ತಿಳಿಸಿದರು.
ಆ ಮೂಲಕ ಸದ್ಯ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಅಬಕಾರಿ ಸಚಿವರು ಇದೇ ಕೊನೆ ಎಂದು ಪರೋಕ್ಷವಾಗಿ ಟಾಂಗ್ ನೀಡಿದರು. ಈಗ ನಾನು ಫುಲ್‌ಟೈಮ್ ರಾಜಕೀಯಕ್ಕೆ ಪ್ರವೇಶ ಮಾಡಿರುವ ಹಿನ್ನೆಲೆಯಲ್ಲಿ ಕೋವಿಡ್ ಮುಗಿದ ನಂತರ ಪ್ರತಿದಿನ ತಾಲೂಕಿಗೆ ಭೇಟಿ ನೀಡಿ ಜನಸಾಮಾನ್ಯರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುತ್ತೇನೆ. ನನ್ನ ಸಮಾಜ ಸೇವೆ ನಿರಂತರವಾಗಿ ಮುಂದುವರೆಯಲಿದೆ ಎಂದು ತಿಳಿಸಿದರು.
ಇನ್ನು ಉನ್ನತ ಶಿಕ್ಷಣಕ್ಕೆ ತೆರಳುವ ಕಡುಬಡ ವಿದ್ಯಾರ್ಥಿಗಳಿಗೆ, ಆಸ್ಪತ್ರೆ ಚಿಕಿತ್ಸೆಗೆ, ಮದುವೆಗಳಿಗೆ, ದೇವಾಲಯಗಳ ಜೀರ್ಣೋದ್ದಾರಕ್ಕೆ ಆರ್ಥಿಕ ಸಹಾಯವನ್ನು ನೀಡುತ್ತೇನೆ ಎಂದು ತಿಳಿಸಿದರು.