ಕೋಲಾರ: ಜಿಲ್ಲೆಯಿಂದ ಒಬ್ಬ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಬರಲಿದ್ದಾರೆ ಎಂಬ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆಗೆ, ಕೋಲಾರ ಜಿಲ್ಲೆಯ ಕಾಂಗ್ರೆಸ್ ಶಾಸಕರು ಹಾಗೂ ಜಿಲ್ಲಾಧ್ಯಕ್ಷರು ಪ್ರತಿಕ್ರಿಯೆ ನೀಡಿದ್ದಾರೆ. ಅವರ ಮಾತನ್ನು ಅಲ್ಲಗಳೆದಿದ್ದಾರೆ.
ಮಾಲೂರು ಶಾಸಕ ಕೆ.ವೈ. ನಂಜೇಗೌಡ ಮಾತನಾಡಿ, ಬಿಜೆಪಿಗೆ ಹೋಗುವಂತಹವರು ಹುಚ್ಚರು, ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಯಾವ ರೀತಿ ಸ್ಪಂದಿಸಿವೆ ಎಂದು ಜನತೆ ನೋಡಿದ್ದಾರೆ. ಹೀಗಾಗಿ ಕೋಲಾರದಲ್ಲಿಯೇ ಅಲ್ಲ ರಾಜ್ಯದ ಯಾವೊಬ್ಬ ಕಾಂಗ್ರೆಸ್ ಶಾಸಕರೂ ಬಿಜೆಪಿಗೆ ಹೋಗುವುದಿಲ್ಲ ಎಂದರು. ರೈತರು, ಬಡವರ ಪರವಾಗಿ ಇರಬೇಕೆಂದರೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕೆಂದು ರಾಜ್ಯದ ಜನತೆ ತೀರ್ಮಾನ ಮಾಡಿದ್ದಾರೆ ಎಂದು ಹೇಳಿದ್ರು.
ಬಂಗಾರಪೇಟೆ ಶಾಸಕ ಎಸ್. ಎನ್. ನಾರಾಯಣಸ್ವಾಮಿ ಮಾತನಾಡಿ, ರಮೇಶ್ ಜಾರಕಿಹೊಳಿ ಅವರು ಭ್ರಮೆಯಲ್ಲಿದ್ದಾರೆ. ಅಲ್ಲದೆ ನಾವು ಯಾವುದೇ ಕಾರಣಕ್ಕೂ ಮಾತೃ ಪಕ್ಷ ಬಿಟ್ಟು ಹೋಗುವುದಿಲ್ಲ, ಜೊತೆಗೆ ಯಾವುದೇ ಹಣದ ಆಮಿಷಗಳಿಗೆ ಬಲಿಯಾಗುವುದಿಲ್ಲ ಎಂದರು. ಬಿಜೆಪಿ ಮುಳುಗುವಂತಹ ಪಕ್ಷವಾಗಿದ್ದು, ಕಾಂಗ್ರೆಸ್ ಪಕ್ಷ ಮುಂದಿನ ದಿನಗಳಲ್ಲಿ ಭದ್ರ ಬುನಾದಿ ಹಾಕಲಿದೆ ಎಂದರು. ಸಿದ್ದರಾಮಯ್ಯ ಅವರು ಒಳ್ಳೆಯ ಆಡಳಿತ ಕೊಟ್ಟಿದ್ದು, ಜಿಲ್ಲೆಯ ಯಾವೊಬ್ಬ ಶಾಸಕರು ಬಿಜೆಪಿಗೆ ಹೋಗುವುದಿಲ್ಲ ಎಂದರು.
ಕೆಜಿಎಫ್ ಶಾಸಕಿ ರೂಪಕಲಾ ಮಾತನಾಡಿ, ಕಾಂಗ್ರೆಸ್ ಪಕ್ಷಕ್ಕೆ ನಿಷ್ಠಾವಂತ ಕಾರ್ಯಕರ್ತೆಯಾಗಿ ನಾನು ಕೆಲಸ ಮಾಡುತ್ತೇನೆ. ಯಾವುದೇ ಕಾರಣಕ್ಕೆ ಪಕ್ಷಕ್ಕೆ ದ್ರೋಹ ಮಾಡುವುದಿಲ್ಲ ಎಂದರು.
ಕೋಲಾರದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಚಂದ್ರಾರೆಡ್ಡಿ ಪ್ರತಿಕ್ರಿಯಿಸಿ, ಜಿಲ್ಲೆಯಲ್ಲಿ ಎಲ್ಲಾ ಶಾಸಕರು ಧೀಮಂತರಿದ್ದಾರೆ. ಅಲ್ಲದೆ ಎಲ್ಲರೂ ಕಾಂಗ್ರೆಸ್ ಪಕ್ಷಕ್ಕೆ ನಿಷ್ಠಾವಂತರಾಗಿದ್ದು, ಯಾರನ್ನೂ ಕೊಂಡುಕೊಳ್ಳಲು ಆಗುವುದಿಲ್ಲ ಎಂದು ಹೇಳಿದ್ರು. ರಮೇಶ್ ಜಾರಕಿಹೊಳಿ ಅವರಿಗೆ ಬುದ್ದಿಯಿಲ್ಲ ಎಂದ ಅವರು, ಕೋಲಾರ ಜಿಲ್ಲೆಯ ಎಲ್ಲಾ ಶಾಸಕರು ಒಗ್ಗಟ್ಟಿನಿಂದ ಇದ್ದಾರೆ ಎಂದರು.