ಕೋಲಾರ: ನಗರದಲ್ಲಿ ಕೊರೊನಾ ಆತಂಕದ ಮಧ್ಯೆ ನಿರಾತಂಕವಾಗಿ ಮಾಸ್ಕ್ ಇಲ್ಲದೇ ಸಂಚರಿಸುವ ಬೈಕ್ ಸವಾರರಿಗೆ 100 ರೂಪಾಯಿ ದಂಡ ವಿಧಿಸುವ ಮೂಲಕ ನಗರಸಭೆ ಆಯುಕ್ತ ಶ್ರೀಕಾಂತ್ ಎಚ್ಚರಿಕೆ ನೀಡಿದ್ದಾರೆ.
ಇಂದು ಮುಂಜಾನೆಯಿಂದಲೂ ಮಾಸ್ಕ್ ಇಲ್ಲದವರ ವಿರುದ್ದ ಕಾರ್ಯಾಚರಣೆ ನಡೆಸುತ್ತಿರುವ ಅಧಿಕಾರಿಗಳು 10 ಸಾವಿರ ರೂಪಾಯಿವರೆಗೂ ದಂಡ ವಿಧಿಸಿದ್ದಾರೆ. ಅಲ್ಲದೇ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ವ್ಯಾಪಾರ ವಹಿವಾಟಿನಲ್ಲಿ ತೊಡಗಿದ್ದ ಅಂಗಡಿ ಮಾಲೀಕರಿಗೆ 2 ಸಾವಿರ ರೂಪಾಯಿ ದಂಡ ವಿಧಿಸುವ ಮೂಲಕ ಶಾಕ್ ನೀಡಿದ್ದಾರೆ.
ಸರ್ಕಾರ ಕೊರೊನಾ ಸೋಂಕು ಹರಡದಂತೆ ಎಚ್ಚರಿಕೆ ವಹಿಸುವ ಹಿನ್ನೆಲೆಯಲ್ಲಿ ಸಾಕಷ್ಟು ಕಟ್ಟುನಿಟ್ಟಿನ ಕ್ರಮಗಳನ್ನ ಕೈಗೊಂಡಿದ್ದು, ಈಗಾಗಲೇ 1 ಸಾವಿರ ರೂಪಾಯಿ ದಂಡ ವಿಧಿಸುವಂತೆ ಆದೇಶ ಹೊರಡಿಸಿದೆ. ಆದ್ರೆ ನೂತನ ಸರ್ಕಾರದ ಮಾರ್ಗಸೂಚಿ ಇನ್ನೂ ನಮ್ಮ ಕೈ ಸೇರಿಲ್ಲ ಹಾಗಾಗಿ ಸದ್ಯಕ್ಕೆ 100 ರೂಪಾಯಿ ದಂಡ ವಿಧಿಸಲಾಗುತ್ತಿದೆ. ಇದು ಕೂಡ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಗುತ್ತಿದೆಯೇ ಹೊರತು ಜನರಿಗೆ ತೊಂದರೆ ಕೊಡುವ ಉದ್ದೇಶ ಇಲ್ಲ ಎಂದು ಕೋಲಾರ ನಗರಸಭೆ ಆಯುಕ್ತ ಶ್ರೀಕಾಂತ್ ಹೇಳಿದ್ದಾರೆ.
ಇನ್ನೂ ಕೋಲಾರ ನಗರದ ಮೆಕ್ಕೆ ವೃತ್ತದಲ್ಲಿ ಜಯ ಕರ್ನಾಟಕ ಸಂಘಟನೆ ಮುಖಂಡರು ಸಾರ್ವಜನಿಕರಿಗೆ ಮಾಸ್ಕ್ ವಿತರಣೆ ಮಾಡುವ ಮೂಲಕ ಜಾಗೃತಿ ಮೂಡಿಸಿದರು.