ಕೋಲಾರ: ರೆಮ್ಡಿಸಿವರ್ ಕಾಳಸಂತೆಯಲ್ಲಿ ಮಾರಾಟವಾಗುತ್ತಿರುವುದರ ಹಿಂದೆ ರಾಜ್ಯ ಸರ್ಕಾರದ ಕೈವಾಡವಿದೆ ಎಂದು ಕೆಪಿಸಿಸಿ ಕಾರ್ಯಾದ್ಯಕ್ಷ ರಾಮಲಿಂಗಾರೆಡ್ಡಿ ಆರೋಪಿಸಿದ್ದಾರೆ.
ಓದಿ: ರಾಜ್ಯದಲ್ಲಿ ಉತ್ಪಾದನೆಯಾಗುವ ಆಮ್ಲಜನಕವನ್ನು ಇಲ್ಲೇ ಹಂಚಿಕೆ ಮಾಡಲು ಕೇಂದ್ರಕ್ಕೆ ಮನವಿ: ಸುಧಾಕರ್
ಇಂದು ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಉಚಿತ ಆ್ಯಂಬುಲೆನ್ಸ್ ಗಳ ವಿತರಣೆ ಕಾರ್ಯಕ್ರಮ ಉದ್ಘಾಟಿಸಿದ ನಂತರ, ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಸರ್ಕಾರವೇ ನೇರವಾಗಿ ಕಂಪನಿಗಳಿಂದ ರೆಮ್ಡಿಸಿವರ್ ಖರೀದಿಸುತ್ತಿದೆ. ಇದರಲ್ಲಿ ಮಧ್ಯವರ್ತಿಗಳು ಹಾಗೂ ಡೀಲರ್ಸ್ ಗಳು ಯಾರೂ ಇಲ್ಲ. ಆದರೂ ಬ್ಲಾಕ್ ಮಾರ್ಕೆಟ್ ನಲ್ಲಿ ದುಬಾರಿ ಬೆಲೆಗೆ ವ್ಯಾಕ್ಸಿನ್ ಸಿಗುತ್ತಿರುವುದು ಹೇಗೆ ಎಂದು ಪ್ರಶ್ನಿಸಿದರು.
ಅಲ್ಲದೆ ಇದಕ್ಕೆ ನೇರವಾಗಿ ರಾಜ್ಯ ಸರ್ಕಾರವೇ ಕಾರಣ ಎಂದರು. ಕೊರೊನಾ ಸೋಂಕು ತಡೆಗಟ್ಟುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ಪ್ರಾರಂಭದಲ್ಲಿಯೇ ಮುಂಜಾಗ್ರತ ಕ್ರಮವಾಗಿ, ಐಸಿಯು, ವೆಂಟಿಲೇಟರ್, ಆಕ್ಸಿಜನ್ ವ್ಯವಸ್ಥೆ ಮಾಡಬೇಕಿತ್ತು. ಆದರೆ ರಾಜ್ಯ ಸರ್ಕಾರ ಇದ್ಯಾವುದನ್ನೂ ಮಾಡದೆ, ಕೊರೊನಾ ತಡೆಯುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಹೇಳಿದರು.
ಆರೋಗ್ಯ ಸಚಿವ ಸುಧಾಕರ್ ಅವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಅವರು, ಸುಧಾಕರ್ ಅವರು ಚಿಕ್ಕಬಳ್ಳಾಪುರಕ್ಕೆ ಮಾತ್ರ ಆರೋಗ್ಯ ಮಂತ್ರಿಗಳಾಗಿದ್ದಾರೆ. ರಾಜ್ಯದ ಇತರೆ ಜಿಲ್ಲೆಗಳ ಕಡೆಯೂ ಗಮನ ಕೊಡಬೇಕೆಂದರು. ಸರ್ಕಾರಗಳು ನೀಡುತ್ತಿರುವ ಕೊರೊನಾ ಸಾವಿನ ವರದಿಗಳಿಗಿಂತ, ಮೂರುಪಟ್ಟು ಹೆಚ್ಚಿನ ಸಾವುಗಳು ಸಂಭವಿಸುತ್ತಿವೆ. ಆದರೆ ಸರ್ಕಾರ ಸೋಂಕಿತರ ಸಾವಿನ ವರದಿಗಳನ್ನು ಸರಿಯಾಗಿ ನೀಡುತ್ತಿಲ್ಲ ಎಂದರು.
ಈ ವೇಳೆ ಮಾಜಿ ಸಂಸದ ಕೆ.ಎಚ್.ಮುನಿಯಪ್ಪ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಚಂದ್ರಾರೆಡ್ಡಿ ಸೇರಿದಂತೆ ಪಕ್ಷದ ಮುಖಂಡರು ಹಾಜರಿದ್ದರು.