ಕೋಲಾರ: ಮಾಜಿ ಸಚಿವ ವರ್ತೂರು ಪ್ರಕಾಶ್ ಮಾನಸಿಕ ಅಸ್ವಸ್ಥತೆಗೆ ಗುರಿಯಾಗಿರುವ ಪರಿಣಾಮ, ಮಾಜಿ ಸಂಸದ ಕೆ ಎಚ್ ಮುನಿಯಪ್ಪ ವಿರುದ್ಧ ಇಲ್ಲ ಸಲ್ಲದ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಎಲ್.ಎ. ಮಂಜುನಾಥ್ ಲೇವಡಿ ಮಾಡಿದರು.
ನಗರದಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ವರ್ತೂರು ಪ್ರಕಾಶ್ ಅವರು ತಮ್ಮ ನಾಲಿಗೆಯನ್ನ ಹರಿಬಿಟ್ಟಿದ್ದಾರೆ. ಕೆ.ಎಚ್. ಮುನಿಯಪ್ಪ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟನೆ ಮಾಡಬೇಕೆಂದು ಹೇಳಿಕೆ ನೀಡಿರುವುದು ಹಾಸ್ಯಾಸ್ಪದ ಎಂದು ವಾಗ್ದಾಳಿ ನಡೆಸಿದರು.
ವರ್ತೂರು ಪ್ರಕಾಶ್ ಯಾವುದೇ ಪಕ್ಷಕ್ಕೆ ಸೇರುವುದಿಲ್ಲ, ಕೇವಲ ಮಾತಿನಲ್ಲಿ ತನ್ನ ಬೇಳೆ ಬೇಯಿಸಿಕೊಳ್ಳಲು ಅರ್ಥವಿಲ್ಲದ ಹೇಳಿಕೆಗಳನ್ನು ನೀಡಿ ಕಾಂಗ್ರೆಸ್ ಪಕ್ಷ ಹಾಗೂ ಮುಖಂಡರ ಆಕ್ರೋಶಕ್ಕೆ ಗುರಿಯಾಗುತ್ತಿದ್ದಾರೆ. ಅಲ್ಲದೇ ನಮ್ಮ ನಾಯಕರಾದ ಕೆ.ಎಚ್. ಮುನಿಯಪ್ಪ ಅವರ ಬಗ್ಗೆ ಮಾತನಾಡಲು ವರ್ತೂರು ಪ್ರಕಾಶ್ ಯಾರು? ಅವರಿಗೆ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು.
ಇದನ್ನೂ ಓದಿ: ಕೆ.ಎಚ್. ಮುನಿಯಪ್ಪರನ್ನು ಪಕ್ಷದಿಂದ ಉಚ್ಚಾಟನೆ ಮಾಡಬೇಕು: ವರ್ತೂರು ಪ್ರಕಾಶ್
ನಮ್ಮ ನಾಯಕರ ಬಗ್ಗೆ ಮಾತನಾಡಲು ಅವರು ಕಾಂಗ್ರೆಸ್ ಪಕ್ಷದಲ್ಲಿ ಇಲ್ಲ. ಅವರೇ ಸ್ವಂತ ಪಕ್ಷ ಕಟ್ಟಿಕೊಂಡು ಓಡಾಡುತ್ತಿದ್ದಾರೆ. ಸುಳ್ಳು ಹೇಳಿಕೊಂಡು ರಾಜಕೀಯ ಮಾಡುವುದನ್ನು ಮೊದಲು ವರ್ತೂರು ಪ್ರಕಾಶ್ ಬಿಡಬೇಕು ಎಂದರು.
ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಅವರು ಯಾವುದೇ ಕಾರಣಕ್ಕೂ ವರ್ತೂರು ಪ್ರಕಾಶ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವುದಿಲ್ಲ ಎಂದಿದ್ದಾರೆ. ಇದನ್ನರಿತು ವರ್ತೂರು ಪ್ರಕಾಶ್ ಕಾಂಗ್ರೆಸ್ ಪಕ್ಷದ ನಾಯಕರ ವಿರುದ್ಧ ಮಾತನಾಡುವುದನ್ನು ನಿಲ್ಲಿಸಲಿ ಎಂದು ಆಗ್ರಹಿಸಿದರು.