ಕೋಲಾರ: ಕಾಡುಪ್ರಾಣಿಗಳ ಬೇಟೆಗೆ ಹಾಕಲಾಗಿದ್ದ ತಂತಿಯ ಉರುಳಿಗೆ ಸಿಲುಕಿ ಹೆಣ್ಣು ಚಿರತೆ ಸಾವಿಗೀಡಾದ ಘಟನೆ ಕೋಲಾರ ಜಿಲ್ಲೆಯಲ್ಲಿ ಜರುಗಿದೆ. ತಂತಿಯ ಉರುಳು ಚಿರತೆಯ ಸೊಂಟದ ಭಾಗಕ್ಕೆ ಸಿಲುಕಿ ಒದ್ದಾಡುತ್ತಿದ್ದುದ ಗಮನಿಸಿದ ಸ್ಥಳೀಯರು ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು.
ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ಸುರಕ್ಷಿತವಾಗಿ ಚಿರತೆಯನ್ನು ರಕ್ಷಿಸುವ ಕೆಲಸ ಮಾಡಿದ್ದಾರೆ. ಆದರೆ ತೀವ್ರವಾಗಿ ಗಾಯಗೊಂಡಿದ್ದರಿಂದ ಸಾವನ್ನಪ್ಪಿದೆ. ಕಳೇಬರದ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ತನಿಖೆ ಮುಂದುವರಿದಿದೆ. ಈ ಭಾಗದಲ್ಲಿ ಕಾಡುಪ್ರಾಣಿಗಳ ಬೇಟೆಗಾರರು ಹೆಚ್ಚಾಗಿದ್ದು ಕಠಿಣ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಹಾಗೂ ಪ್ರಾಣಿಪ್ರಿಯರು ಒತ್ತಾಯಿಸಿದ್ದಾರೆ.
ಹುಲಿ ಉಗುರು ಮಾದರಿ ಪೆಂಡೆಂಟ್ ಧರಿಸಿದ್ದ ಅರಣ್ಯಾಧಿಕಾರಿ ಬಂಧನ: ಹುಲಿ ಉಗುರು ಮಾದರಿ ಪೆಂಡೆಂಟ್ ಧರಿಸಿದ್ದ ಆರೋಪದ ಮೇಲೆ ಚಿಕ್ಕಮಗಳೂರು ಜಿಲ್ಲೆಯ ಕಳಸ ಉಪ ವಲಯ ಅರಣ್ಯಾಧಿಕಾರಿ ದರ್ಶನ್ ಅವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ದರ್ಶನ್ ಅವರು ಹುಲಿ ಉಗುರು ಮಾದರಿ ಪೆಂಡೆಂಟ್ ಇರುವ ಸರ ಹಾಕಿಕೊಂಡ ಫೋಟೋಗಳನ್ನು ತಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಅಪ್ಲೋಡ್ ಮಾಡಿದ್ದರು. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಅರಣ್ಯ ಇಲಾಖೆಗೆ ದೂರು ನೀಡಲಾಗಿತ್ತು.
ದರ್ಶನ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಆಲ್ದೂರು ಅರಣ್ಯ ಕಛೇರಿಗೆ ಸ್ಥಳೀಯರಾದ ಸುಪ್ರೀತ್ ಅರೇನೂರು ಮತ್ತು ಖಾದರ್ ಎಂಬವರು ದೂರು ನೀಡಿದ್ದರು. ಪ್ರಕರಣ ದಾಖಲಾಗುತ್ತಿದ್ದಂತೆ ದರ್ಶನ್ ಅರಣ್ಯ ಅಧಿಕಾರಿಗಳ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿತ್ತು. ವಿಚಾರಣೆಗೆ ಬಾರದ ಕಾರಣ ಅರಣ್ಯ ಇಲಾಖೆ ಅಧಿಕಾರಿಗಳು ದರ್ಶನ್ ಅವರನ್ನು ಇಲಾಖೆಯ ಸೇವೆಯಿಂದ ಅಮಾನತು ಮಾಡಿ ಆದೇಶ ಹೊರಡಿಸಿದ್ದರು. ಬಳಿಕವೂ ಕೂಡ ಸಂಪರ್ಕಕ್ಕೆ ಸಿಗದ ಹಿನ್ನೆಲೆಯಲ್ಲಿ ಬಂಧನಕ್ಕೆ ಹುಡುಕಾಟ ನಡೆಸಿದ್ದರು. ಇಂದು ಕೊಪ್ಪ ವಿಭಾಗದ ಅರಣ್ಯ ಅಧಿಕಾರಿಗಳು ಎನ್.ಆರ್.ಪುರದಲ್ಲಿ ಬಂಧಿಸಿ ಕೊಪ್ಪ ಅರಣ್ಯ ಉಪವಿಭಾಗ ಕಛೇರಿಗೆ ಕರೆದೊಯ್ದಿದ್ದಾರೆ.
ಇದನ್ನೂ ಓದಿ: ಆನೆ ದವಡೆ ವಶಕ್ಕೆ ಪಡೆದ ಅರಣ್ಯಾಧಿಕಾರಿಗಳು: ವ್ಯಕ್ತಿ ಬಂಧನ