ಕೋಲಾರ : ಕೊರೊನಾ ಲಾಕ್ಡೌನ್ ಹಿನ್ನೆಲೆ ಜಿಲ್ಲೆಯ ರೈತರ ಸಮಸ್ಯೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ಮಾಡಿದ್ದು, ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದರು.
ಇಂದು ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರಿಗಳ ಜತೆ ಸಭೆ ನಡೆಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರೈತರ ಸಮಸ್ಯೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ. ಸಮಸ್ಯೆ ಬಗೆಹರಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಹೇಳಿದರು.

ಜಿಲ್ಲೆಯ ಪ್ರಮುಖ ಬೆಳೆಗಳಾದ ಟೊಮೇಟೊ, ದಪ್ಪ ಮೆಣಸಿನಕಾಯಿ, ದ್ರಾಕ್ಷಿ ಬೆಳೆ ಹಾಗೂ ಇನ್ನಿತರ ತರಕಾರಿಗಳಿಗೆ ಬೆಂಬಲ ಬೆಲೆ ಘೋಷಣೆ ಮಾಡುವಂತೆ ಮುಖ್ಯಮಂತ್ರಿಗಳ ಬಳಿ ಮನವಿ ಮಾಡುತ್ತೇನೆ. ಅಲ್ಲದೇ ಸರ್ಕಾರದಿಂದ ಯಾವುದೇ ತರಕಾರಿಗಳನ್ನ ಖರೀದಿ ಮಾಡುತ್ತಿಲ್ಲ. ಬದಲಾಗಿ ಹಾಪ್ ಕಾಮ್ಸ್ ಗಳಿಗೆ ನಿರ್ದೇಶನ ನೀಡಲಾಗಿದ್ದು, ಹಾಪ್ ಕಾಮ್ಸ್ ಗಳಿಂದ ಖರೀದಿ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಇದೇ ವೇಳೆ, ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ಇಲ್ಲದೇ ಕೋವಿಡ್-19 ಮುಕ್ತ ಜಿಲ್ಲೆಗಾಗಿ ಸಹಕರಿಸಿದ ಅಧಿಕಾರಿಗಳಿಗೆ ಹಾಗೂ ಜನಪ್ರತಿನಿದಿಗಳಿಗೆ ಕೃತಜ್ಞತೆ ಸಲ್ಲಿಸಿದರು.