ಕೋಲಾರ: ಉರಿಗೌಡ ಮತ್ತು ನಂಜೇಗೌಡ ಹೆಸರಲ್ಲಿ ರಾಜಕಾರಣ ಮಾಡುವುದರಿಂದ ಯಾರಿಗೂ ಶೋಭೆ ತರುವುದಿಲ್ಲ ಎಂದು ಜೆಡಿಎಸ್ ಯುವ ಘಟಕದ ರಾಜ್ಯಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.
ಕೋಲಾರ ಜಿಲ್ಲೆಯ ಬಂಗಾರಪೇಟೆ ಜೆಡಿಎಸ್ ಸಮಾವೇಶದಲ್ಲಿ ಭಾಗವಹಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘‘ಚುನಾವಣೆ ಸಮೀಪಿಸುತ್ತಿರರುವ ಸಂದರ್ಭದಲ್ಲಿ ಬಿಜೆಪಿ ಪಕ್ಷದವರು ಬಹಳ ಜನರನ್ನು ಜ್ಞಾಪಿಸಿಕೊಳ್ಳುತ್ತಾರೆ. ಉರಿಗೌಡ ನಂಜೇಗೌಡರ ಇತಿಹಾಸದ ಕಾಲ್ಪನಿಕ ಪಾತ್ರಗಳು ಎಂದು ಮಾಧ್ಯಮದಲ್ಲಾದ ಚರ್ಚೆಯ ಮೂಲಕ ತಿಳಿದುಕೊಂಡೆ. ಉರಿಗೌಡ ನಂಜೇಗೌಡೆ ಹೆಸರಲ್ಲಿ ರಾಜಕಾರಣ ಮಾಡಬಾರದು ಎಂದು ಹೇಳಿದರು.
ಬಿಜೆಪಿ ಸರ್ಕಾರವು ತನ್ನ ಆಡಳಿತದಲ್ಲಿ ಕೊಟ್ಟಿರುವ ಯೋಜನೆಗಳು ಮತ್ತು ಕಾರ್ಯಕ್ರಮಗಳ ಬಗ್ಗೆ ಚರ್ಚೆ ಮಾಡಬೇಕು. ಆದರೆ ಬಿಜೆಪಿಯವರು ಚುನಾವಣೆ ಸಂದರ್ಭದಲ್ಲಿ ಉರಿಗೌಡ ನಂಜೇಗೌಡರ ಹೆಸರಿನಲ್ಲಿ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಇದು ನನ್ನ ಅಭಿಪ್ರಾಯದಲ್ಲಿ ಸರಿಯಲ್ಲ ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದರು.
ಹೆಚ್ಚು ಪ್ರಾಮುಖ್ಯತೆಯನ್ನು ಕೊಡುವುದನ್ನು ಬಿಡಬೇಕು: ಒಕ್ಕಲಿಗರ ಮತಗಳನ್ನು ವಿಭಜನೆ ಮಾಡುತ್ತೀವಿ ಎಂಬ ಭಾವನೆಯಿಂದ ಬಿಜೆಪಿಯವರು ಉರಿಗೌಡ ನಂಜೇಗೌಡ ಹೆಸರನ್ನು ಪ್ರಸ್ತಾಪಿಸುತ್ತಿದ್ದಾರೆ. ಆದರೆ ಇವೆಲ್ಲಾ ತಾತ್ಕಾಲಿಕ. ಈ ವಿಚಾರದ ಬಗ್ಗೆ ಹೆಚ್ಚು ಪ್ರಾಮುಖ್ಯತೆಯನ್ನು ಕೊಡುವುದನ್ನು ಬಿಡಬೇಕು ಎಂದು ಹೇಳಿದರು.
ಮಾಜಿ ಸಿಎಂ ಸಿದ್ದರಾಮಯ್ಯ ಅವರ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿ, ಸಿದ್ದರಾಮಯ್ಯ ಅವರು ಹಿರಿಯ ರಾಜಕಾರಣಿ. ಅವರ ಲೆಕ್ಕಾಚಾರಗಳು ಅವರ ಪಕ್ಷಕ್ಕೆ ಬಿಟ್ಟಂತಹ ತೀರ್ಮಾನ. ಈ ವಿಚಾರದ ಬಗ್ಗೆ ಮಾತನಾಡಲು ನಾನು ಸೂಕ್ತವಾದ ವ್ಯಕ್ತಿ ಅಲ್ಲ ಎಂದು ಹೇಳಿದರು.
ಇದನ್ನೂ ಓದಿ :ಭಾರತೀಯ ಎಂದು ಸರ್ಕಾರಿ ಕೋಟಾದಲ್ಲಿ ವೈದ್ಯಕೀಯ ಪದವಿ : ಎನ್‌ಆರ್‌ಐ ಶುಲ್ಕ ಪಾವತಿಸಿ ಅಮೆರಿಕಕ್ಕೆ ಹಿಂದಿರುಗಲು ಹೈಕೋರ್ಟ್ ಸೂಚನೆ
ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇಯಲ್ಲಿ ಟೋಲ್ ಸಂಗ್ರಹ ಮಾಡುತ್ತಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಡೆಯನ್ನು ಖಂಡಿಸಿ ಮಾರ್ಚ್ 16 ರಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ದಶಪಥ ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿದ್ದರು. ಈ ಪ್ರತಿಭಟನೆಯಲ್ಲಿ ಮಾಗಡಿ ಜೆಡಿಎಸ್ ಶಾಸಕ ಮಂಜುನಾಥ್ ಸೇರಿದಂತೆ ಕಾರ್ಯಕರ್ತರು ಮತ್ತು ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದ್ದರು.
ರಾಮನಗರದ ಹೊರವಲಯದ ಬೆಂಗಳೂರು ದಕ್ಷಿಣ ತಾಲೂಕಿನ ಕಣಮಿಣಿಕೆ ಟೋಲ್ ಪ್ಲಾಜಾ ಬಳಿ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಸರ್ವಿಸ್ ರಸ್ತೆ ಇಲ್ಲದೇ ಟೋಲ್ ಸಂಗ್ರಹ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಈ ವೇಳೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಜೊತೆ ದೂರವಾಣಿ ಮೂಲಕ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದರು.
ಇದನ್ನೂ ಓದಿ : ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹಿಸಿ ಮುಷ್ಕರ : ಸಿಎಂ ನಿವಾಸಕ್ಕೆ ಮುತ್ತಿಗೆಗೆ ಮುಂದಾದ ಆಟೋ ಚಾಲಕರು ಪೊಲೀಸ್ ವಶಕ್ಕೆ