ಕೋಲಾರ: ನಗರದಲ್ಲಿ ಹದಗೆಟ್ಟ ರಸ್ತೆಗಳ ಸರಿಪಡಿಸಲು ನಿರ್ಲಕ್ಷ್ಯ ವಹಿಸುತ್ತಿರುವ ಲೋಕೋಪಯೋಗಿ ಇಲಾಖೆ ಹಾಗೂ ನಗರಸಭೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಪ್ರಗತಿಪರ ಸಂಘಟನೆಗಳು ಎಂ. ಬಿ ರಸ್ತೆ ಸಂಪೂರ್ಣ ಬಂದ್ ಮಾಡಿ ಪ್ರತಿಭಟಿಸಿದರು.
ನಗರದಲ್ಲಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಸುಮಾರು ಒಂದು ಗಂಟೆಯ ಕಾಲ ರಸ್ತೆ ಬಂದ್ ಮಾಡಿ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಾ ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಬರುವರೆಗೂ ಪ್ರತಿಭಟನೆಯನ್ನು ಮುಂದುವರಿಸುವುದಾಗಿ ಪಟ್ಟು ಹಿಡಿದರು.
ಒಂದು ಗಂಟೆಯ ನಂತರ ಸ್ಥಳಕ್ಕೆ ಬಂದ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಪ್ರತಿಭಟನಾಕಾರರು, ನಗರಸಭೆಯ ಅಧಿಕಾರಿಗಳು ಪಿಡಬ್ಲ್ಯೂಡಿ ಅಧಿಕಾರಿಗಳ ಮೇಲೆ, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ನಗರಸಭೆಯ ಅಧಿಕಾರಿಗಳ ಮೇಲೆ ಆರೋಪ ಮಾಡುತ್ತಾ ಕಾಲಹರಣ ಮಾಡುತ್ತಿದ್ದಾರೆ. ಈ ಕಾರಣ ನಗರದ ಎಲ್ಲಾ ರಸ್ತೆಗಳು ಹಾಳಾಗಿದ್ದು, ಜನರು ಓಡಾಡಲು ಪರಿತಪಿಸುತ್ತಿದ್ದಾರೆ. ಸುಮಾರು ಎರಡು ವರ್ಷಗಳ ಹಿಂದೆ ಈ ವಿಷಯದಲ್ಲಿ ಕೋಲಾರ ಬಂದ್‍ಗೆ ಕರೆ ನೀಡಿದಾಗ. ಆಗಿನ ಜಿಲ್ಲಾಧಿಕಾರಿಗಳು ಒಂದು ತಿಂಗಳೊಳಗಾಗಿ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ್ದರು. ಆದರೆ, ಇದುವರೆಗೂ ನಗರದ ರಸ್ತೆಗಳನ್ನು ಸರಿಪಡಿಸುವಲ್ಲಿ ಲೋಕೋಪಯೋಗಿ ಇಲಾಖೆ ಮತ್ತು ನಗರಸಭೆಯು ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರು.