ಕೋಲಾರ: ಮಾಜಿ ಸಚಿವ ವರ್ತೂರು ಪ್ರಕಾಶ್ ಅಪಹರಣ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಈವರೆಗೆ ಬೇರೆ ರಾಜ್ಯದವರು ಅವರನ್ನು ಅಪಹರಿಸಿದ್ದರು ಎನ್ನಲಾಗುತ್ತಿತ್ತು. ಆದರೆ, ಈಗ ನಮ್ಮ ರಾಜ್ಯದವರೇ ಪ್ರಕಾಶ್ ಅವರನ್ನು ಕಿಡ್ನಾಪ್ ಮಾಡಿದ್ದರು ಎಂಬ ಮಾಹಿತಿಯನ್ನು ಎಸ್ಪಿ ಕಾರ್ತಿಕ್ ರೆಡ್ಡಿ ತಿಳಿಸಿದ್ದಾರೆ.
ನಗರದ ಎಸ್ಪಿ ಕಚೇರಿಯಲ್ಲಿ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 13 ಜನ ಪ್ರಮುಖರ ವಿಚಾರಣೆ ನಡೆಸಲಾಗಿದೆ. ಪ್ರಕಾಶ್ ಅಪಹರಣಕಾರರು ನಮ್ಮ ರಾಜ್ಯದವರೇ, ಹೊರ ರಾಜ್ಯದವರಲ್ಲ ಎಂಬ ಮಾಹಿತಿ ಲಭ್ಯವಾಗಿದೆ ಎಂದರು. ಈಗಾಗಲೇ ನಾಲ್ಕು ತಂಡಗಳನ್ನು ರಚಿಸಿದ್ದು, ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ. ಘಟನೆ ಸಂಬಂಧ ಹಲವು ಪ್ರಮುಖ ಸಾಕ್ಷಿಗಳನ್ನು ಸಂಗ್ರಹಿಸಲಾಗಿದೆ ಎಂದು ತಿಳಿಸಿದರು.