ಕೋಲಾರ: ರೈತರು, ಮಹಿಳೆಯರು, ಸಾಮಾನ್ಯ ಜನಕ್ಕೆ ಅನುಕೂಲವಾಗುವ ರೀತಿಯಲ್ಲಿ ಬಿಜೆಪಿ ಉತ್ತಮ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಈ ಬಾರಿ ರಾಜ್ಯದಲ್ಲಿ 22 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲೋದ್ರಲ್ಲಿ ಯಾವುದೇ ಅನುಮಾನವಿಲ್ಲ. ಅದೇ ರೀತಿ ಕೇಂದ್ರದಲ್ಲಿ ಬಿಜೆಪಿ ಸ್ವಂತ ಬಲದಿಂದ ಸರ್ಕಾರ ರಚನೆ ಮಾಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಇಂದು ಕೋಲಾರ ಜಿಲ್ಲೆ ಮಾಲೂರು ಪಟ್ಟಣದಲ್ಲಿ ಕೋಲಾರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್. ಮುನಿಸ್ವಾಮಿ ಪರ ಪ್ರಚಾರಕ್ಕೆ ಬಂದಿದ್ದ ವೇಳೆ ಮಾತನಾಡಿದ ಅವರು, 2014 ರಲ್ಲಿದ್ದ ಅಲೆಗಿಂತ ಈ ಬಾರಿ ಬಿಜೆಪಿಗೆ ಪೂರಕ ವಾತಾವರಣವಿದೆ. ಅಲ್ಲದೆ ರಾಜ್ಯದಲ್ಲಿ ಮೈತ್ರಿ ಸರ್ಕಾರದಲ್ಲಿನ ಒಡಕು ಸಹಜವಾಗಿದೆ. ಇದು ಬಿಜೆಪಿಗೆ ಅನುಕೂಲವಾಗುತ್ತದೆ ಎಂದರು.
ಅಲ್ಲದೆ ಕೋಲಾರ ಕ್ಷೇತ್ರದಲ್ಲಿ ಬಿಜೆಪಿಗೆ ಅಪಾರ ಬೆಂಬಲ ವ್ಯಕ್ತವಾಗಿದೆ. ಮಾಜಿ ಶಾಸಕ ಕೊತ್ತೂರು ಮಂಜುನಾಥ್, ಎಂ.ಸಿ. ಸುಧಾಕರ್ ಸೇರಿದಂತೆ ಇನ್ನೂ ಹಲವರು ಬಿಜೆಪಿಗೆ ಬೆನ್ನೆಲುಬಾಗಿ ನಿಂತಿದ್ದಾರೆ. ಈ ಬಾರಿ ಬಿಜೆಪಿಗೆ ವಿವಿಧ ಪಕ್ಷಗಳ ಬೆಂಬಲ ಕೂಡ ಸಿಗಲಿದೆ ಎಂದು ಯಡಿಯೂರಪ್ಪ ಹೇಳಿದರು.