ಕುಷ್ಟಗಿ, ಕೊಪ್ಪಳ: ರಾಜ್ಯ ಪೊಲೀಸ್ ಇಲಾಖೆಯ ಪ್ರಸ್ತುತ ಪಿಎಸ್ಐ ನೇಮಕಾತಿಯಲ್ಲಿ ಕಲ್ಯಾಣ ಕರ್ನಾಟಕ ಅಭ್ಯರ್ಥಿಗಲಿಗೆ ಮತ್ತೆ ಅನ್ಯಾಯವಾಗಿದೆ. ಸದರಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ರದ್ದುಗೊಳಿಸಿ, ಕಲ್ಯಾಣ ಕರ್ನಾಟಕ ಪ್ರದೇಶದ ಅಭ್ಯರ್ಥಿಗಳಿಗೆ ಮೆರಿಟ್, ರೋಸ್ಟರ್ ಅನ್ವಯ ಆದ್ಯತೆ ನೀಡಬೇಕೆಂದು ಕುಷ್ಟಗಿ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ ಅವರು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.
ಸರ್ಕಾರದ ಕಾರ್ಯದರ್ಶಿ ಬರೆದಿರುವ ಪತ್ರದಲ್ಲಿ ಪ್ರಸ್ತಾಪಿಸಿದಂತೆ ಶಾಸಕ ಬಯ್ಯಾಪೂರ ಅವರು, ಕಲ್ಯಾಣ ಕರ್ನಾಟಕ ಪ್ರದೇಶದ 371 (ಜೆ) ಅಡಿಯಲ್ಲಿ ರಚಿಸಲಾದ ಕರ್ನಾಟಕ ಸಾರ್ವಜನಿಕ ಉದ್ಯೋಗ ಮೀಸಲಾತಿಯಲ್ಲಿ 2013ರ ಆದೇಶದನ್ವಯ ವಿವಿಧ ವೃಂದದ ನೇಮಕಾತಿಯಲ್ಲಿ ಮೀಸಲಾತಿ ಕಲ್ಪಿಸಲಾಗಿದೆ. ನೇಮಕಾತಿ ಪ್ರಾಧಿಕಾರಗಳು ನಡೆಸುವ ಯಾವುದೇ ನೇಮಕಾತಿಯನ್ನು ಕಲ್ಯಾಣ ಕರ್ನಾಟಕ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ 6-6-2020ರ ಸುತ್ತೋಲೆಯಲ್ಲಿ ನಡೆಸುವಂತೆ ಸೂಚ್ಯವಾಗಿ ತಿಳಿಸಲಾಗಿದೆ.
ರಾಜ್ಯ ಪೊಲೀಸ್ ಇಲಾಖೆಯ ಪಿಎಸ್ಐ (ಸಿವಿಲ್) ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿದೆ. ಈ ಪಟ್ಟಿಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದ ಅಭ್ಯರ್ಥಿಗಳು ಹೆಚ್ಚು ಅಂಕ ಪಡೆದರೂ, ಸಹ ಸ್ಥಳೀಯ ವೃಂದದ ಆಯ್ಕೆ ಪಟ್ಟಿಯಲ್ಲಿ ಆಯ್ಕೆ ಮಾಡಲಾಗಿದೆ. ಇದು ಇನ್ನುಳಿದ ಅಭ್ಯರ್ಥಿಗಳಿಗೆ ಅನ್ಯಾಯವಾಗಲಿದೆ.
ಗ್ರಾಮೀಣ ಭಾಗದ ಅಭ್ಯರ್ಥಿಗಳ 6-6-2020ರ ಸುತ್ತೋಲೆಯನ್ನು ಅರ್ಥ ಮಾಡಿಕೊಳ್ಳುವಲ್ಲಿ ಗೊಂದಲ ಮಾಡಿಕೊಂಡಿಕೊಂಡಿದ್ದಾರೆ. ಪಿಎಸ್ಐ ನೇಮಕಾತಿಯಲ್ಲಿ ಅರ್ಜಿ ಸಲ್ಲಿಸುವಾಗ ತಪ್ಪಾಗಿ ಆಯ್ಕೆ ಸೂಚಿಸಿರುವುದರಿಂದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ರಾಜ್ಯ ಮಟ್ಟದ ಅಭ್ಯರ್ಥಿಗಳಿಗಿಂತ ಹೆಚ್ಚು ಅಂಕ ಪಡೆದರೂ ಸಹ ಸ್ಥಳೀಯ ವೃಂದದಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಆಯ್ಕೆಯಾಗಿರುತ್ತಾರೆ.
ಈ ಹಿನ್ನೆಲೆಯಲ್ಲಿ ಸದರಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ರದ್ದುಗೊಳಿಸಿ ಮೆರಿಟ್, ರೋಸ್ಟರ್ ಅನ್ವಯ ಕಲ್ಯಾಣ ಕರ್ನಾಟಕ ಪ್ರದೇಶದ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಬೇಕು. ಮಿಕ್ಕುಳಿದ ವೃಂದದಲ್ಲಿ ಆಯ್ಕೆ ಮಾಡಿ ಕಡಿಮೆ ಅಂಕ ಪಡೆದಿರುವ ಅಭ್ಯರ್ಥಿಗಳನ್ನು ಸ್ಥಳೀಯ ವೃಂದದಲ್ಲಿ ಆಯ್ಕೆ ಮಾಡುವಂತೆ ಸಂಬಂಧಪಟ್ಟ ನೇಮಕಾತಿ ಪ್ರಾಧಿಕಾರಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ