ಕೊಪ್ಪಳ: ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ಕೊಪ್ಪಳದಲ್ಲಿ ಇಂದು ಧ್ವಜಾರೋಹಣ ನೆರವೇರಿಸಿದರು.
ಜಿಲ್ಲಾಡಳಿತ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಬಳಿಕ ಅಲಂಕೃತ ತೆರೆದ ವಾಹನದಲ್ಲಿ ತೆರಳಿ ಪರೇಡ್ ವೀಕ್ಷಿಸಿದರು. ನಂತರ ಪೊಲೀಸ್, ಗೃಹರಕ್ಷಕದಳ, ಸ್ಕೌಟ್ಸ್, ಗೈಡ್ಸ್, ಅರಣ್ಯ, ಎನ್ಸಿಸಿ ತಂಡಗಳಿಂದ ಗೌರವ ವಂದನೆ ಸ್ವೀಕರಿಸಿದರು. ಬಳಿಕ ಮಾತನಾಡಿದ ಸಚಿವ ಬಿ.ಸಿ. ಪಾಟೀಲ್ ಅವರು, ದೇಶಕ್ಕೆ ಸ್ವಾತಂತ್ರ್ಯ ಬಂದ ಒಂದು ವರ್ಷದ ಬಳಿಕ ಹೈದರಾಬಾದ್ ಕರ್ನಾಟಕಕ್ಕೆ ಸ್ವಾತಂತ್ರ್ಯ ಸಿಕ್ಕಿತು. ಹೈದರಾಬಾದ್ ನಿಜಾಮನ ಕಪಿಮುಷ್ಠಿಯಿಂದ ಈ ಭಾಗವನ್ನು ವಿಮೋಚನೆ ಮಾಡಲು ಅನೇಕ ಸ್ವಾತಂತ್ರ್ಯ ಹೋರಾಟಗಾರರು ತ್ಯಾಗ ಬಲಿದಾನ ಮಾಡಿದ್ದಾರೆ. ಅವರನ್ನು ನಾವು ಸ್ಮರಿಸಬೇಕು ಎಂದರು.
ಸಿಎಂ ಯಡಿಯೂರಪ್ಪ ಅವರು ಈ ಭಾಗಕ್ಕೆ ಕಲ್ಯಾಣ ಕರ್ನಾಟಕ ಎಂದು ನಾಮಕರಣ ಮಾಡಿದ್ದಾರೆ. ಅಂದಿನಿಂದ ಈ ಭಾಗವನ್ನು ಕಲ್ಯಾಣ ಕರ್ನಾಟಕ ಎಂದು ಕರೆಯಲಾಗುತ್ತದೆ. ಅಲ್ಲದೆ ಈ ಭಾಗದ ಅಭಿವೃದ್ಧಿಗೆ ಸರ್ಕಾರ ಅನೇಕ ಕ್ರಮಗಳನ್ನು ಕೈಗೊಂಡಿದೆ. ಫಲವತ್ತಾದ ಭೂಮಿ, ವಿದ್ಯಾವಂತರು ಹಾಗೂ ಬುದ್ಧಿವಂತರನ್ನು ಈ ನಾಡು ಹೊಂದಿದೆ. ಹೀಗಾಗಿ ಈ ಭಾಗದ ಜನರು ಹಿಂದುಳಿದ ಪ್ರದೇಶದವರು ಎಂಬ ಕೀಳರಿಮೆಯನ್ನು ಬಿಡಬೇಕು ಎಂದರು.