ಕೊಪ್ಪಳ: ಜಿಲ್ಲೆಯಲ್ಲಿಯೂ ಬ್ಲ್ಯಾಕ್ ಫಂಗಸ್ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿನಿಂದ ಇಬ್ಬರು ಸಾವನ್ನಪ್ಪಿದ್ದಾರೆ.
ಈ ಕುರಿತಂತೆ ಮಾಹಿತಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ್, ಕೊಪ್ಪಳ ಜಿಲ್ಲೆಯಲ್ಲಿಯೂ ಸಹ ಬ್ಲ್ಯಾಕ್ ಫಂಗಸ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಪತ್ತೆಯಾಗಿರುವ 6 ಪ್ರಕರಣಗಳಲ್ಲಿ ಇಬ್ಬರು ಸೋಂಕಿತರು ಸಾವನ್ನಪ್ಪಿದ್ದಾರೆ. ಇನ್ನೂ ನಾಲ್ಕು ಬ್ಲ್ಯಾಕ್ ಫಂಗಸ್ ಪ್ರಕರಣಗಳು ಸಕ್ರಿಯ ಪ್ರಕರಣಗಳಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದರು.
ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ಅಗತ್ಯವಿರುವ 20 ವಯಲ್ ಔಷಧಿ ಬಂದಿದೆ. ಈ ಸೋಂಕು ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂಬ ಶಂಕೆಯಿಂದ ಅದಕ್ಕೆ ಬೇಕಾದ ಅಗತ್ಯ ಔಷಧಿಯನ್ನು ನೀಡಲು ಸರ್ಕಾರದ ಗಮನಕ್ಕೆ ತರಲಾಗಿದೆ. ಇಂದು 20 ವಯಲ್ ಔಷಧಿ ಬಂದಿದ್ದು, ಅಗತ್ಯಕ್ಕೆ ತಕ್ಕಂತೆ ಔಷಧಿ ಇಂಡೆಂಟ್ ಹಾಕಿದಾಗ ಔಷಧಿ ಪೂರೈಕೆಯಾಗಲಿದೆ ಎಂದು ಸಚಿವ ಬಿ.ಸಿ. ಪಾಟೀಲ್ ಹೇಳಿದರು.