ಕಲಬುರಗಿ: ಉಪ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.
ನಗರದ ಸರ್ದಾರ್ ಪಟೇಲ್ ವೃತ್ತದಲ್ಲಿ ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆ ದಿವ್ಯಾ ಹಾಗರಗಿ ನೇತೃತ್ವದಲ್ಲಿ ವಿಜಯೋತ್ಸವ ಆಚರಿಸಲಾಯಿತು. ಸಿಎಂ ಯಡಿಯೂರಪ್ಪ ಹಾಗೂ ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರಕ್ಕೆ ಕ್ಷೀರಾಭಿಷೇಕ ಮಾಡಿ, ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಯಡಿಯೂರಪ್ಪ ಪರ ಘೋಷಣೆ ಕೂಗಿದ ಕಾರ್ಯಕರ್ತರು ಕುಣಿದು ಕುಪ್ಪಳಿಸಿ, ಸಂಭ್ರಮ ವ್ಯಕ್ತಪಡಿಸಿದರು.
ಕೊಪ್ಪಳದಲ್ಲೂ ವಿಜಯೋತ್ಸವ: ಉಪಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ್ದಕ್ಕೆ ಕೊಪ್ಪಳದಲ್ಲಿಯೂ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.
ನಗರದ ಅಶೋಕ ಸರ್ಕಲ್ನಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು. ಸಿಎಂ ಯಡಿಯೂರಪ್ಪ ಹಾಗೂ ಬಿಜೆಪಿ ಪರವಾಗಿ ಘೋಷಣೆ ಹಾಕಿದರು. ಇನ್ನು ಕುಷ್ಟಗಿಯಲ್ಲಿಯೂ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದರು. ಸಂಭ್ರಮಾಚರಣೆಯಲ್ಲಿ ಬಿಜೆಪಿ ಮುಖಂಡರಾದ ಸಿ.ವಿ. ಚಂದ್ರಶೇಖರ, ಹಾಲೇಶ ಕಂದಾರಿ, ಅಪ್ಪಣ್ಣ ಪದಕಿ, ಹೇಮಲತಾ ನಾಯಕ್, ಉಮೇಶ್ ಕುರ್ಡೇಕರ್ ಸೇರಿದಂತೆ ಮೊದಲಾದವರು ಪಾಲ್ಗೊಂಡಿದ್ದರು.