ಗಂಗಾವತಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟಿಸುತ್ತಿದ್ದ ದೆಹಲಿಯ ಜೆಎಂಐ ವಿದ್ಯಾರ್ಥಿಗಳ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದನ್ನು ಖಂಡಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಯಿತು.
ನಗರದ ಗಾಂಧಿ ವೃತ್ತದಲ್ಲಿ ಜಮಾಯಿಸಿದ ಸಂಘಟನೆ ಸದಸ್ಯರು, ರಾಜ್ಯ ಸಮಿತಿ ಸದಸ್ಯ ಸರ್ಫರಾಜ್ ಹಾಗೂ ಜಿಲ್ಲಾಧ್ಯಕ್ಷ ಚಾಂದ್ ಸಲ್ಮಾನ್ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟಿಸಿದರು.
ಗೃಹ ಸಚಿವ ಅಮಿತ್ ಶಾ ಹಾಗೂ ಪ್ರಧಾನಿ ಮೋದಿ ದೇಶದ ಜನರನ್ನು ಜಾತಿ, ಧರ್ಮಗಳ ಆಧಾರದ ಮೇಲೆ ವಿಭಜಿಸಿ ದ್ವೇಷ ಬಿತ್ತುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.