ಕೊಪ್ಪಳ: ಕೋವಿಡ್-19 ವಿಷಯದಲ್ಲಿ ಆಗಿರುವ ಅವ್ಯವಹಾರ ಕುರಿತಂತೆ ರಾಜ್ಯ ಸರ್ಕಾರ ಉತ್ತರ ಕೊಡಬೇಕು ಹಾಗೂ ಲೆಕ್ಕ ಕೊಡಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಮಾಜಿ ಸಚಿವರಾದ ಯು.ಟಿ. ಖಾದರ್, ಉಮಾಶ್ರೀ ಹಾಗೂ ಶಿವರಾಜ ತಂಗಡಗಿ ನೇತೃತ್ವದಲ್ಲಿ ನಗರದ ಅಶೋಕ ಸರ್ಕಲ್ನಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

ಕೊರೊನಾದಿಂದ ಜನರು ತತ್ತರಿಸಿ ಹೋಗಿದ್ದಾರೆ. ಜನರು ಸಂಕಷ್ಟದಲ್ಲಿ ಇದ್ದಾರೆ. ಜನರ ರಕ್ಷಣೆ ಮಾಡಬೇಕಾದ ರಾಜ್ಯ ಸರ್ಕಾರ ಕೊರೊನಾ ವಿಷಯದಲ್ಲಿ ಭ್ರಷ್ಟಾಚಾರ ನಡೆಸಿದೆ. ಈ ಕುರಿತಂತೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷ ಅವ್ಯವಹಾರದ ದಾಖಲೆ ನೀಡಿದೆ. ಅಲ್ಲದೇ ಲೆಕ್ಕ ನೀಡುವಂತೆ ಆಗ್ರಹಿಸಿದೆ. ಆದರೆ ಸರ್ಕಾರ ಮಾತ್ರ ಲೆಕ್ಕ ಕೊಡುತ್ತಿಲ್ಲ ಎಂದರು.

ಸಾರ್ವಜನಿಕರ ಹಣವನ್ನು ಲೂಟಿ ಮಾಡಿರುವ ಬಿಜೆಪಿ ಸರ್ಕಾರಕ್ಕೆ ನಾಚಿಕೆಯಾಗಬೇಕು ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ ಲೆಕ್ಕ ಹಾಗೂ ಉತ್ತರ ಕೊಡುವವರೆಗೆ ನಾವು ಬಿಡುವುದಿಲ್ಲ. ಮುಂದಿನ ದಿನಗಳಲ್ಲಿ ತಾಲೂಕು ಮಟ್ಟದಲ್ಲಿಯೂ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುವುದಾಗಿ ಪ್ರತಿಭಟನಾಕಾರರು ಎಚ್ಚರಿಸಿದರು.