ಕೊಪ್ಪಳ : ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ನಗರದಲ್ಲಿ ಧರಣಿ ಸತ್ಯಾಗ್ರಹ ನಡೆಸಿದರು.
ನಗರದ ಜಿಲ್ಲಾಡಳಿತ ಭವನದ ಮುಂದೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶಿವರಾಜ ತಂಗಡಗಿ ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕೊರೊನಾದಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಕೇಂದ್ರ ಸರ್ಕಾರ ಜನರಿಂದ ಸುಲಿಗೆಗೆ ಇಳಿದಿದೆ. ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ ಬೆಲೆ ಏರಿಕೆ ಖಂಡಿಸಿ ಬಿಜೆಪಿಯವರು ಪ್ರತಿಭಟನೆ ನಡೆಸಿದ್ದರು. ಈಗ ಇವರು ಮಾಡುತ್ತಿರೋದು ಏನು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈಗ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಬೆಲೆ ಏರಿಕೆಯಾಗಿಲ್ಲ. ಆದರೂ ಸಹ ಕೇಂದ್ರ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಮಾಡಿದೆ. ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯಿಂದ ಅನೇಕ ವಸ್ತುಗಳ ಬೆಲೆಗಳು ಏರಿಕೆಯಾಗುತ್ತಿವೆ. ಇದರಿಂದ ಸಾಮಾನ್ಯ ಜನರು ತತ್ತರಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು. ಕೊರೊನಾ ನಿಯಂತ್ರಣ ಮಾಡುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿವೆ. ಜನರ ನೆರವಿಗೆ ಬರಬೇಕಾದ ಇಂತಹ ಸಂದರ್ಭದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಮಾಡುವ ಮೂಲಕ ಜನರ ಜೇಬಿಗೆ ಕತ್ತರಿ ಹಾಕಿದ್ದಾರೆ. ಚುನಾವಣೆ ಸಂದರ್ಭದಲ್ಲಿ ನೀಡಿದ ಭರವಸೆ ಈಡೇರಿಸುವಲ್ಲಿ ಮೋದಿ ಸೋತಿದ್ದಾರೆ ಎಂದು ಆರೋಪಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ಪಕ್ಷದ ವೀಕ್ಷಕ ಚಂದ್ರಶೇಖರ ಭಟ್ ಸೇರಿದಂತೆ ಮೊದಲಾದವರು ಧರಣಿಯಲ್ಲಿ ಪಾಲ್ಗೊಂಡಿದ್ದರು.