ಕೊಪ್ಪಳ : ಸಮಾನ ಕೆಲಸಕ್ಕೆ ಸಮಾನ ವೇತನ ಹಾಗೂ ಸೇವಾ ಭದ್ರತೆ ಒದಗಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ಸಿಬ್ಬಂದಿ ನಗರದಲ್ಲಿ ಕೈಗೆ ಕಪ್ಪುಪಟ್ಟಿ ಧರಿಸಿ ಸಾಂಕೇತಿಕ ಪ್ರತಿಭಟನೆ ಮಾಡಿದರು.
ನಗರದ ಹಳೆ ಜಿಲ್ಲಾಸ್ಪತ್ರೆ ಕಟ್ಟಡದ ಬಳಿ ತಾಲೂಕು ವೈದ್ಯಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಕಳೆದ 10 ವರ್ಷಗಳಿಂದ ನಾವು ಆರೋಗ್ಯ ಇಲಾಖೆ ಹಾಗೂ ವೈದ್ಯಕೀಯ ಇಲಾಖೆಯಲ್ಲಿ ಗುತ್ತಿಗೆ, ಹೊರ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದೇವೆ. ಸಮಾನ ಕೆಲಸಕ್ಕೆ ಸಮಾನ ವೇತನ ಹಾಗೂ ನಮಗೂ ಸೇವಾ ಭದ್ರತೆ ನೀಡಬೇಕು ಎಂದು ಒತ್ತಾಯಿಸಿದರು.
ಬೇಡಿಕೆ ಈಡೇರಿಸುವಂತೆ ಸರ್ಕಾರಕ್ಕೆ ಈಗಾಗಲೇ ಸಾಕಷ್ಟು ಬಾರಿ ಮನವಿ ಮಾಡಲಾಗಿದೆ. ಆದರೆ, ನಮ್ಮ ಮನವಿಗೆ ಸರ್ಕಾರದಿಂದ ಈವರೆಗೂ ಮನ್ನಣೆ ಸಿಕ್ಕಿಲ್ಲ. ಹೀಗಾಗಿ ನಾವು ಇಂದಿನಿಂದ ಮೇ 21 ರ ವರೆಗೆ ಕೈಗೆ ಕಪ್ಪುಪಟ್ಟಿ ಧರಿಸಿ ಸಾಂಕೇತಿಕವಾಗಿ ಪ್ರತಿಭಟನೆ ನಡೆಸುತ್ತೇವೆ ಎಂದರು.
ನಮ್ಮ ಸಂಘಟನೆಯ ಮುಖಂಡರನ್ನು ಕರೆದು ಚರ್ಚಿಸಿ ಸರ್ಕಾರ ನಮ್ಮ ಬೇಡಿಕೆಗೆ ಸ್ಪಂದಿಸಬೇಕು ಎಂದು ಮನವಿಯಲ್ಲಿ ಸಿಬ್ಬಂದಿ ಆಗ್ರಹಿಸಿದ್ದಾರೆ. ಈ ಸಂದರ್ಭದಲ್ಲಿ ಡಾ.ಮಹೇಶ ಉಮಚಗಿ, ಡಾ.ಸರಳಾ ನಾಲ್ವಾಡ, ಡಾ. ಪ್ರಿಯಾಂಕ, ಸೇರಿದಂತೆ ಇನ್ನಿತರ ಸಿಬ್ಬಂದಿ ಇದ್ದರು.