ಗಂಗಾವತಿ: ಪೌರಾಣಿಕ ಕ್ಷೇತ್ರ ಹಾಗೂ ಧಾರ್ಮಿಕ ಪುಣ್ಯಸ್ಥಳವಾದ ತಾಲೂಕಿನ ಅಂಜನಾದ್ರಿ ಬೆಟ್ಟದ ಆಂಜನೇಯನ ದೇವಾಲಯ ಹಾಗೂ ಸುತ್ತಲಿನ ಪರಿಸರದಲ್ಲಿ ಸಂಪೂರ್ಣವಾಗಿ ಪ್ಲಾಸ್ಟಿಕ್ ನಿಷೇಧಿಸಿ ಜಿಲ್ಲಾಧಿಕಾರಿ ಪಿ.ಸುನಿಲ್ ಕುಮಾರ್ ಆದೇಶ ಹೊರಡಿಸಿದ್ದಾರೆ.
ಕಳೆದ ಒಂದೂವರೆ ವರ್ಷದ ಹಿಂದೆ ದೇಗುಲ ಕಂದಾಯ ಇಲಾಖೆಗೆ ಒಳಪಟ್ಟಿತ್ತು. ಆ ನಂತರ ದೇಗುಲಕ್ಕೆ ಬರುವ ಭಕ್ತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ. ಅಭಿವೃದ್ಧಿಯೂ ನಿರೀಕ್ಷಿತ ಪ್ರಮಾಣಕ್ಕಿಂತ ವೇಗವಾಗಿ ನಡೆಯುತ್ತಿದೆ.
ಭಕ್ತರ ಸಂಖ್ಯೆಯಲ್ಲಿ ಏರಿಕೆಯಾದ ಹಿನ್ನೆಲೆಯಲ್ಲಿ ದೇವಾಲಯದಲ್ಲಿ ಪ್ಲಾಸ್ಟಿಕ್ ಬಳಕೆಯೂ ಹೆಚ್ಚಾಗುತ್ತಿದೆ. ಇದರಿಂದ ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಪ್ಲಾಸ್ಟಿಕ್ ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.