ಕೊಪ್ಪಳ : ಕೊರೊನಾ ಸೋಂಕಿತರಿಗೆ ಸರಿಯಾದ ಮತ್ತು ಸಮರ್ಪಕ ಚಿಕಿತ್ಸೆ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ನಗರದ ಸಾಮಾಜಿಕ ಕಾರ್ಯಕರ್ತ ಸಲೀಂ ಅಳವಂಡಿ ತಮ್ಮ ಇಬ್ಬರು ಸ್ನೇಹಿತರೊಂದಿಗೆ ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಡಳಿತ ಭವನದ ಮುಂದೆ ಮೌನ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಕೊಪ್ಪಳ ಜಿಲ್ಲೆಯಲ್ಲಿ ಕೊರೊನಾ ಸೋಂಕು ದಿನೇದಿನೆ ಹೆಚ್ಚಾಗಿ ಹರಡುತ್ತಿದೆ. ಸೋಂಕಿತರಿಗೆ ಜಿಲ್ಲಾ ಕೋವಿಡ್-19 ಆಸ್ಪತ್ರೆಯಲ್ಲಿ ಸರಿಯಾದ ಚಿಕಿತ್ಸೆ ಸಿಗುತ್ತಿಲ್ಲ. ಇದರಿಂದಾಗಿ ಸೋಂಕಿತರು ಪರದಾಡಬೇಕಾಗಿದೆ.
ಸರಿಯಾಗಿ ಚಿಕಿತ್ಸೆ ದೊರೆಯದೆ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಬಡವರು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಆಗುವುದಿಲ್ಲ. ಹೀಗಾಗಿ, ಸರ್ಕಾರಿ ಆಸ್ಪತ್ರೆಯಲ್ಲಿಯೇ ಸಮರ್ಪಕ ವೈದ್ಯಕೀಯ ಸಿಬ್ಬಂದಿ, ಆಕ್ಸಿಜೆನ್ ವ್ಯವಸ್ಥೆ, ಬೆಡ್ ವ್ಯವಸ್ಥೆ ಸೇರಿ ಸೋಂಕಿತರಿಗೆ ಚಿಕಿತ್ಸೆಗೆ ಬೇಕಾದ ಅಗತ್ಯ ಎಲ್ಲ ಸೌಲಭ್ಯ ಕಲ್ಪಿಸಬೇಕು ಎಂದು ಜಿಲ್ಲಾಡಳಿತವನ್ನು ಒತ್ತಾಯಿಸಿದರು.