ಕೊಪ್ಪಳ: ಸಂಭಾವ್ಯ ಕೊರೊನಾ ಸೋಂಕು ಮೂರನೇ ಅಲೆ ಮಕ್ಕಳನ್ನು ಬಾಧಿಸಲಿದೆ ಎಂಬ ತಜ್ಞರ ವರದಿ ಹಿನ್ನೆಲೆಯಲ್ಲಿ ಅಪೌಷ್ಟಿಕ ಮಕ್ಕಳನ್ನು ಗುರುತಿಸಿ ಪೌಷ್ಟಿಕತೆ ಹೆಚ್ಚಿಸಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ತೊಡಗಿದೆ. ಈಗಾಗಲೇ ಸಾಧಾರಣ ಅಪೌಷ್ಟಿಕತೆಯ ಹಾಗೂ ತೀವ್ರ ಅಪೌಷ್ಟಿಕತೆ ಹೊಂದಿರುವ ಮಕ್ಕಳನ್ನು ಗುರುತಿಸಲಾಗಿದ್ದು ತೀವ್ರ ಅಪೌಷ್ಟಿಕತೆ ಹೊಂದಿರುವ ಮಕ್ಕಳಿಗೆ ಎನ್ಆರ್ಸಿಯಲ್ಲಿ ದಾಖಲಿಸಲು (ನ್ಯೂಟ್ರೆಂಟ್ ರೀಹ್ಯಾಬಿಲಿಟೇಷನ್ ಸೆಂಟರ್) ಮುಂದಾಗಿದೆ.
ಮಕ್ಕಳಲ್ಲಿ ಪೌಷ್ಟಿಕತೆ ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರ ಅನೇಕ ಕ್ರಮಗಳನ್ನು ಕೈಗೊಂಡರೂ ಸಹ ಕೊಪ್ಪಳ ಜಿಲ್ಲೆಯಲ್ಲಿ ಅಪೌಷ್ಟಿಕತೆ ಹೊಂದಿರುವ ಮಕ್ಕಳ ಸಂಖ್ಯೆ ಹೆಚ್ಚಿದೆ. ಇದಕ್ಕೆ ಹಲವಾರು ಕಾರಣಗಳು ಇವೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ನೀಡಿರುವ ಅಧಿಕೃತ ಮಾಹಿತಿ ಪ್ರಕಾರ ಕೊಪ್ಪಳ ಜಿಲ್ಲೆಯಲ್ಲಿ 31 ಸಾವಿರಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಈ ಪೈಕಿ 30,273 ಮಕ್ಕಳು ಸಾಧಾರಣ ಅಪೌಷ್ಟಿಕತೆಯಿಂದ ಬಳಲುತ್ತಿದ್ದರೆ, 748 ಮಕ್ಕಳು ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ.
ಜಿಲ್ಲೆಯ ಕನಕಗಿರಿ ಮತ್ತು ಕುಷ್ಟಗಿ ತಾಲೂಕಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿದ್ದಾರೆ. ಸಂಭಾವ್ಯ ಕೊರೊನಾ ಸೋಂಕಿನ ಮೂರನೇ ಅಲೆ ಮಕ್ಕಳನ್ನು ಬಾಧಿಸಲಿದೆ ಎಂಬ ತಜ್ಞರ ವರದಿ ಹಿನ್ನೆಲೆಯಲ್ಲಿ ತೀವ್ರ ಅಪೌಷ್ಠಿಕತೆ ಹೊಂದಿರುವ 748 ಮಕ್ಕಳಲ್ಲಿ ಈಗಾಗಲೇ 458 ಮಕ್ಕಳ ಆರೋಗ್ಯ ತಪಾಸಣೆ ಮಾಡಿಸಲಾಗಿದೆ. ಇನ್ನುಳಿದ ಮಕ್ಕಳ ಆರೋಗ್ಯ ತಪಾಸಣೆ ಮಾಡಿಸಲಾಗುತ್ತದೆ. ತೀವ್ರ ಅಪೌಷ್ಠಿಕತೆ ಹೊಂದಿರುವ ಮಕ್ಕಳ ಆರೋಗ್ಯ ಸ್ಥಿತಿಗತಿ, ತೂಕ, ಬೇರೆ ಏನಾದರೂ ಆರೋಗ್ಯ ತೊಂದರೆ ಇದೆಯಾ ಎಂದು ಪಾಲಕರಿಂದ ಮಾಹಿತಿ ಪಡೆಯಲಾಗಿದೆ.
ತೀವ್ರ ಅಪೌಷ್ಠಿಕತೆ ಹೊಂದಿರುವ ಮಕ್ಕಳನ್ನು ಎನ್ಆರ್ಸಿಗೆ ದಾಖಲಿಸಿ ಪೌಷ್ಠಿಕತೆ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಜಿಲ್ಲೆಯ ಪ್ರತಿ ತಾಲೂಕಿಗೆ ಒಂದರಂತೆ ಎನ್ಆರ್ಸಿ ಕೇಂದ್ರವನ್ನು ಆರಂಭಿಸುವ ಚಿಂತನೆ ನಡೆದಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಅಕ್ಕಮಹಾದೇವಿ ತಿಳಿಸಿದ್ದಾರೆ. ಇನ್ನು ಸಾಮಾನ್ಯ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಲ್ಲಿ ಪೌಷ್ಟಿಕತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಪಾಲಕರು ಏನೇನು ಮಾಡಬೇಕು, ಯಾವ ರೀತಿ ಆಹಾರ ನೀಡಬೇಕು, ಪೋಷಣೆಯ ಕುರಿತು ಪಾಲಕರಿಗೆ ಮಾಹಿತಿ ನೀಡಲಾಗುತ್ತಿದೆ.