ಗಂಗಾವತಿ: ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ನಗರದ ಕಿವಿ, ಮೂಗು ಮತ್ತು ಗಂಟಲು ತಜ್ಞರೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಕಳೆದ ಒಂದು ತಿಂಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು, ಆರಂಭದಲ್ಲಿ ಒಂದು ವಾರ ಕಾಲ ಮನೆಯಲ್ಲಿದ್ದರು. ಬಳಿಕ ಹುಬ್ಬಳ್ಳಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆರೋಗ್ಯದಲ್ಲಿ ದಿಢೀರ್ ಏರುಪೇರು ಕಂಡುಬಂದ ಹಿನ್ನೆಲೆ, ಸಹೋದ್ಯೋಗಿಗಳು ಹುಬ್ಬಳ್ಳಿಯಿಂದ ಹೈದರಬಾದ್ನ ಖಾಸಗಿ ಆಸ್ಪತ್ರೆಗೆ ಏರ್ ಲಿಫ್ಟ್ ಮಾಡಿ ವೈದ್ಯನಿಗೆ ಚಿಕಿತ್ಸೆ ಕೊಡಿಸಿದ್ದರು. ಕಳೆದ ಎರಡು ವಾರಗಳಿಂದ ಹೈದರಾಬಾದ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೈದ್ಯನ ಆರೋಗ್ಯದಲ್ಲಿ ಸುಧಾರಣೆ ಕಾಣದ ಹಿನ್ನೆಲೆ, ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ವೈದ್ಯನ ತಂದೆ ಶ್ರೀನಿವಾಸ್ ಶೆಟ್ಟಿ ದೃಢಪಡಿಸಿದ್ದಾರೆ. ಮೃತರಿಗೆ ತಂದೆ-ತಾಯಿ, ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ.